ಬೆಂಗಳೂರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ8ನೇ ತರಗತಿ ಬೋಧನೆ) ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಪತಿಯ ಬದಲಾಗಿ ತಂದೆಯ ಆದಾಯ ಪ್ರಮಾಣ ಪತ್ರ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡದ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯನ್ನು ಆ.4ಕ್ಕೆ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.
ನೇಮಕಾತಿ ಪತ್ರ ನೀಡದ ಕ್ರಮವನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರಿದ್ದ ವಿಭಾಗೀಯ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಆದೇಶದ ದೃಢೀಕರಿಸಲಾದ ಪ್ರತಿಗಳು ಮತ್ತು ಎಲ್ಲ ದಾಖಲೆಗಳ ತರ್ಜುಮೆ ಪ್ರತಿಗಳನ್ನು ಸಲ್ಲಿಸುವುದಕ್ಕೆ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.
ರಾಜ್ಯ ಸರ್ಕಾರವು 2022ರಲ್ಲಿ 15 ಸಾವಿರ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಅಧಿಸೂಚನೆ ಹೊರಡಿಸಿ ಪರೀಕ್ಷೆ ನಡೆಸಿತ್ತು. ಪರೀಕ್ಷೆಯಲ್ಲಿ 13,352 ಮಂದಿ ಅರ್ಹರಾಗಿದ್ದಾರೆ. ನೇಮಕಾತಿ ಪ್ರಕ್ರಿಯೆಯಲ್ಲಿ ಮದುವೆಯಾಗಿ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ತಂದೆಯ ಬದಲಿಗೆ ಪತಿಯ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿತ್ತು. ಪ್ರಕರಣವು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣಾ ಹಂತದಲ್ಲಿದೆ.
ಈ ವರೆಗೂ 13,352 ಅರ್ಹ ಅಭ್ಯರ್ಥಿಗಳಲ್ಲಿ ನ್ಯಾಯಾಲಯದ ತೀರ್ಪಿನ ಆಧಾರದಲ್ಲಿ 11,494 ಮಂದಿಗೆ ನೇಮಕಾತಿ ಆದೇಶ ಪ್ರತಿ ನೀಡಲಾಗಿದೆ. ಉಳಿದ 1,858 ಮಂದಿಯಲ್ಲಿ 481 ಅಭ್ಯರ್ಥಿಗಳಿಗೆ ಮೀಸಲಾತಿ ವಿಚಾರವಾಗಿ ಸಮಸ್ಯೆಯಾಗಿದೆ. ಇದನ್ನು ಹೊರತುಪಡಿಸಿದರೆ ಅಂತಿಮವಾಗಿ ಉಳಿಯುವ 1,377 (ಯಾವುದೇ ಸಮಸ್ಯೆ ಇಲ್ಲದ) ಅಭ್ಯರ್ಥಿಗಳು ಆದೇಶ ಪ್ರತಿಗಾಗಿ ಕಾಯುತ್ತಿದ್ದಾರೆ.