ಕಂಪ್ಲಿಯ ಸೋಮಪ್ಪ ಗುಡಿ ಬಳಿ ಗಿಡಗಂಟಿಗಳಲ್ಲಿ ಮರೆಯಾಗಿರುವ ಸರ್ಕಾರಿ ಸರ್ಕಾರಿ ಹಿಪ್ರಾ ಶಾಲೆ ಕಟ್ಟಡ.  
ನ್ಯೂಸ್

ಶಾಲಾ ಸ್ವಚ್ಛತೆಗೆ ಹೊರಗುತ್ತಿಗೆ ಸಿಬ್ಬಂದಿ ನೇಮಿಸುವಂತೆ ಶಿಕ್ಷಕರ ಸಂಘ ಒತ್ತಾಯ

ಬೆಂಗಳೂರು ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪಂಚಾಯಿತಿ ವತಿಯಿಂದ ಸರ್ಕಾರಿ ಶಾಲೆಗಳ ಸ್ವಚ್ಛತೆಗಾಗಿ ವ್ಯವಸ್ಥೆ ಮಾಡಬೇಕು ಅಥವಾ ಬಿಸಿಯೂಟ ಸಿಬ್ಬಂದಿ ಮಾದರಿಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ನೇಮಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಸರ್ಕಾರಕ್ಕೆ ಮನವಿ ಮಾಡಿದೆ.

ಸಂಘದ ಅಧ್ಯಕ್ಷ ಕೆ. ನಾಗೇಶ್ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದ್ದಾರೆ.

ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು ಹಾಗೂ ಸಂಬಂಧಿಸಿದ ಇಲಾಖೆಗಳ ವ್ಯಾಪ್ತಿಗೆ ಬರುವ ಸ್ವಚ್ಛತಾ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸುವಂತೆ ಒತ್ತಾಯಿಸಿದ್ದಾರೆ.

ಶಾಲಾ ಸುರಕ್ಷತೆ, ಶೌಚಾಲಯ ಸ್ವಚ್ಛತೆ ಹಾಗೂ ಶಾಲಾ ಸ್ವಚ್ಛತೆಯ ಮಾರ್ಗದರ್ಶನ ನೀಡುವ ಬಗ್ಗೆ ಸ್ಪಷ್ಟ ಸುತ್ತೋಲೆ ಹೊರಡಿಸಬೇಕು. ಶೌಚಾಲಯ, ಕುಡಿಯುವ ನೀರಿನ ಸ್ವಚ್ಛತೆಗಾಗಿ ಅನುದಾನ ಹೆಚ್ಚಿಸುವುದಕ್ಕಿಂತ ಅಗತ್ಯ ಸಿಬ್ಬಂದಿ ಒದಗಿಸಬೇಕು.

ಸ್ವಚ್ಛತೆಯ ವಿಚಾರವಾಗಿ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರ ಅಮಾನತು ಪ್ರಕರಣಗಳನ್ನು ಹಿಂಪಡೆಯಬೇಕು. ಇದಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಪ್ರಕರಣಗಳನ್ನು ದಾಖಲಿಸದಂತೆ ನೋಡಿಕೊಳ್ಳಬೇಕು. ಹಾಗೆಯೇ ರಾಜ್ಯದ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ವರದಿ ಪಡೆದು ಸೌಲಭ್ಯಗಳನ್ನು ತಕ್ಷಣ ಜಾರಿಗೊಳಿಸಬೇಕು.

ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸಬೇಕೆಂಬ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ.