ನ್ಯೂಸ್

ಅಕ್ರಮ ಮರ ಕಡಿತಲೆಗೆ ಶಿಕ್ಷೆ ಪ್ರಮಾಣ ಹತ್ತುಪಟ್ಟು ಹೆಚ್ಚಳ: ಸಚಿವ ಈಶ್ವರ ಖಂಡ್ರೆ ಸೂಚನೆ | Environmental protection responsibility

ಬೆಂಗಳೂರು: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ ಎಂದು ಘನೋರ ಕೃತ್ಯವೆಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದರತ್ತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರ ಗಮನಸೆಳೆದಿದ್ದಾರೆ.

ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿರುವುದನ್ನು ಇಲಾಖೆ ಅಧಿಕಾರಿಗಳಿಗೆ ಕಳುಹಿಸಿದ ಟಿಪ್ಪಣಿಯಲ್ಲಿ ಖಂಡ್ರೆ ಉಲ್ಲೇಖಿಸಿ, ದಂಡ ಮತ್ತು ಶಿಕ್ಷೆಯ ಪ್ರಮಾಣ ಹೆಚ್ಚಳದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಸಂರಕ್ಷಣೆ ಎಲ್ಲರ ಹೊಣೆ

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದಿದ್ದಾರೆ

ನೂರಾರು ವರ್ಷದಿಂದ ಬೆಳೆದ ಮರಗಳನ್ನು ಸಂರಕ್ಷಿಸದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ.