ಸೊರಬ ತಾಲೂಕಿನ ಹೆಗ್ಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಶಂಕರ್ ಶೇಟ್ ಉದ್ಘಾಟಿಸಿದರು. ಫಕೀರಸ್ವಾಮಿ ಸಾರೇಕೊಪ್ಪ, ಗೋಪಾಲ, ಜಯಪ್ರಕಾಶ್, ಗಿರೀಶ್ ಮತ್ತಿತರರಿದ್ದರು.  
ನ್ಯೂಸ್

ಅಭಿವೃದ್ಧಿಗೆ ವಿಜ್ಞಾನಿಗಳ ಕೊಡುಗೆ ಅಪಾರ

ಸೊರಬ: ದೇಶದ ವಿಜ್ಞಾನ ಮತ್ತು ತಂತ್ರಜ್ಞಾನದ ಅಭಿವೃದ್ಧಿಗೆ ವಿಜ್ಞಾನಿಗಳ ಕೊಡುಗೆ ಅಪಾರ. ವಿದ್ಯಾರ್ಥಿಗಳು ವೈಚಾರಿಕವಾಗಿ ಚಿಂತನೆ ಮಾಡಬೇಕು ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಶಂಕರ್ ಶೇಟ್ ಹೇಳಿದರು.

ಹೆಗ್ಗೋಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಾಲಾ ಹಂತದಲ್ಲೇ ವಿಜ್ಞಾನದ ಬಗ್ಗೆ ಆಸಕ್ತಿ ಹೊಂದಿ ಸಕ್ರಿಯವಾಗಿ ಅಧ್ಯಯನದಲ್ಲಿ ತೊಡಗಿಸಿಕೊಂಡಾಗ ಭವಿಷ್ಯದಲ್ಲಿ ವಿಜ್ಞಾನಿಗಳ ಹಾಗೆ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದರು.

ವಿಜ್ಞಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ವಿಜ್ಞಾನಿಗಳ ಸತತ ಪ್ರಯತ್ನದಿಂದ ಅನೇಕ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ. ಈ ಸಾಧನೆಯಿಂದ ವಿದೇಶಗಳು ಭಾರತದತ್ತ ತಿರುಗಿ ನೋಡುವಂತಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಭವ್ಯ ಭಾರತದ ಸತ್ಪ್ರಜೆಯಾಗಿ ರೂಪುಗೊಳ್ಳಲು ಮುಂದಾಗಬೇಕು ಎಂದರು.

ಬಿಅರ್‌ಪಿ ಮಂಜಪ್ಪ ಹುಲ್ತಿಕೊಪ್ಪ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿ ಕೊಳ್ಳುವುದರಿಂದ ಮುಂಬರುವ ದಿನಗಳಲ್ಲಿ ಇದರಿಂದ ತಮ್ಮ ಅಧ್ಯಯನಕ್ಕೆ ಅನುಕೂಲವಾಗಲಿದೆ ಎಂದರು.

ರೈತ ಸಂಘದ ಫಕೀರಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ, ಗ್ರಾಪಂ ಸದಸ್ಯ ಜಯಪ್ರಕಾಶ್, ಮುಖ್ಯ ಶಿಕ್ಷಕ ಗಿರೀಶ್, ಸಿಆರ್‌ಪಿ ರಾಘವೇಂದ್ರ, ಶಿಕ್ಷಕರಾದ ಅನಿಲ್‌ಕುಮಾರ್, ಪ್ರೇಮ್‌ಕುಮಾರ್, ಪ್ರಸನ್ನ, ರಾಘವೇಂದ್ರ, ವಿಜಯಲಕ್ಷ್ಮೀ, ದೊರೆರಾಜ್, ಮನೋಹರ್, ಚಂದ್ರಕಲಾ, ಗೀತಾ, ಎಚ್.ಮನೋಹರ್ ಮತ್ತಿತರರಿದ್ದರು.