ಮೈಸೂರು: ದಸರಾ ಮಹೋತ್ಸವಕ್ಕೆ ಮೆರುಗು ನೀಡುವ ವಿದ್ಯುತ್ ದೀಪಾಲಂಕಾರ 21 ದಿನಗಳ ಕಾಲ ಮಿನುಗಲಿದ್ದು, ಜನರನ್ನು ತನ್ನತ್ತ ಆಕರ್ಷಿಸುತ್ತಿದೆ.
ನಾಡಹಬ್ಬ ದಸರೆಯ ಪ್ರಮುಖ ಆಕರ್ಷಣೆ ಜಂಬೂಸವಾರಿ, ಪಂಜಿನ ಕವಾಯತನ್ನು ಕಂಡು ಸಂತಸಗೊಂಡಿರುವ ಜನ, ಈಗ ವಿದ್ಯುತ್ ದೀಪಾಲಂಕಾರ ನೋಡಲು ಮುಗಿ ಬೀಳುತ್ತಿದ್ದಾರೆ. ವಿದ್ಯುತ್ ದೀಪಾಲಂಕಾರ ಮುಂದುವರಿದಿರುವುದರಿಂದ ದಸರಾ ಮುಗಿದರೂ ಅದರ ಸಂಭ್ರಮ ಮುಂದುವರಿದಿದೆ.
136 ಕಿ.ಮೀ ದೀಪಾಲಂಕಾರ:
ದಸರಾ ಹಿನ್ನೆಲೆಯಲ್ಲಿ ಈ ಬಾರಿ ನಗರದ 136 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ನಗರದ ಪ್ರಮುಖ ಸ್ಥಳಗಳಲ್ಲಿ ಎಲ್‌ಇಡಿ ಬಲ್ಬ್‌ಗಳಿಂದ ನಿರ್ಮಿಸಲಾದ 80 ವಿವಿಧ ಪ್ರತಿಕೃತಿಗಳನ್ನು ಇರಿಸಲಾಗಿದೆ. ವಿದ್ಯುತ್ ದೀಪಾಲಂಕಾರಕ್ಕಾಗಿ 300 ಕಿ.ಲೋ ವ್ಯಾಟ್‌ಗಳ, 2,57,520 ಯೂನಿಟ್ ವಿದ್ಯುತ್ ಬಳಕೆ ಮಾಡಲಾಗುತ್ತಿದೆ.
ಆಕರ್ಷಣೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿ ಕೋಲ್ಕತಾ ಮಾದರಿ ಲೈಟಿಂಗ್ ಸಹ ಅಳವಡಿಸಲಾಗಿದ್ದು, ಇದರ ಮೂಲಕ ಹಲವು ಕಡೆಗಳಲ್ಲಿ ಬಣ್ಣಬಣ್ಣದ ದೀಪಗಳಿಂದ ಅಲಂಕಾರ ಮೆರುಗು ಹೆಚ್ಚಿಸಿದೆ.
ಅರಮನೆ ಸುತ್ತಲಿನ ರಸ್ತೆಗಳು ಸೇರಿದಂತೆ ಸಯ್ಯಜಿರಾವ್ ರಸ್ತೆ, ಇರ್ವಿನ್ ರಸ್ತೆ, ಅಲ್ಬರ್ಟ್ ವಿಕ್ಟರ್ ರಸ್ತೆ, ಜೆಎಲ್‌ಬಿ ರಸ್ತೆ, ಚಾಮರಾಜ ಜೋಡಿರಸ್ತೆ, ಹೊರವಲಯದಲ್ಲಿನ ಪ್ರಮುಖ ಹೆದ್ದಾರಿಗಳಿಗೂ ದೀಪಾಲಂಕಾರ ಮಾಡಲಾಗಿದೆ.
ದೊಡ್ಡಕೆರೆ ಮೈದಾನ, ಕೆ.ಆರ್.ವೃತ್ತ, ಚಾಮರಾಜ ವೃತ್ತ, ಜಯಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಜಗಜೀವನರಾಂ ವೃತ್ತ, ಹೈವೇ ಸರ್ಕಲ್, ಎಲ್‌ಐಸಿ ವೃತ್ತ ಸೇರಿದಂತೆ ವಿವಿಧೆಡೆ ಹಲವು ಕಲಾಕೃತಿಗಳನ್ನು ನಿರ್ಮಿಸಲಾಗಿದೆ.
ದಸರಾ ದೀಪಾಲಂಕಾರದಲ್ಲಿ ಸೆಸ್ಕ್ ವತಿಯಿಂದ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, ಆ ಮೂಲಕ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಪ್ರಮುಖವಾಗಿ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು, ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ, ವಿಡಿಯೋ ಶೂಟ್ ಮಾಡುವುದನ್ನು ತಪ್ಪಿಸುವುದು, ಮಳೆ ಸಂದರ್ಭದಲ್ಲಿ ವಿದ್ಯುತ್ ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರ ವಹಿಸಲು ತಿಳಿಸಲಾಗಿದೆ.
ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ವಾಹನ ಸವಾರರು ಈ ಬಗ್ಗೆ ನಿಗಾವಹಿಸಿ ಸುರಕ್ಷಿತವಾಗಿ ಸಂಚರಿಸುವಂತೆ, ವಿದ್ಯುತ್ ಸಂಬಂಧಿತ ದೂರು,ದೀಪಾಲಂಕಾರದಿಂದ ತೊಂದರೆ ಆದಲ್ಲಿ ಸಹಾಯವಾಣಿ 1912 ಸಂಖ್ಯೆಗೆ ಸಂಪರ್ಕಿಸುವಂತೆ ಸೆಸ್ಕ್ ಕೋರಿದೆ.