ನ್ಯೂಸ್

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ೧೨೩ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ; ನರಸಿಂಹ ಮೂರ್ತಿ ವಿಶ್ವಾಸ

ಮಡಿಕೇರಿ: ಎರಡು ರಾಜಕೀಯ ಪಕ್ಷಗಳ ಮೇಲೆ ಜಿಲ್ಲೆಯ ಜನ ವಿಶ್ವಾಸ ಕಳೆದುಕೊಂಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ೧೨೩ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಉಸ್ತುವಾರಿ ನರಸಿಂಹ ಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಆಡಳಿತ ಅವಧಿಯಲ್ಲಿ ಕೊಡಗು ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿದ ನರಸಿಂಹ ಮೂರ್ತಿ, ಕಡಿಮೆ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕೊಡಗಿಗೆ ಅಪಾರ ಕೊಡುಗೆ ನೀಡಿದ್ದಾರೆ. ಪ್ರಾಕೃತಿಕ ವಿಕೋಪದ ಸಮಯದಲ್ಲಿ ಕೊಡಗಿಗೆ ಕೊಡುಗೆ ನೀಡಿರುವುದನ್ನು ಜಿಲ್ಲೆಯ ಜನತೆ ಮರೆತಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳ ಮೇಲೆ ರಾಜ್ಯ ಹಾಗೂ ಜಿಲ್ಲೆಯ ಜನತೆ ನಂಬಿಕೆ ಕಳೆದುಕೊಂಡಿದ್ದು, ಮುಂದಿನ ಚುನಾವಣೆಯಲ್ಲಿ ಕೊಡಗಿನ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪಂಚರತ್ನ ಯಾತ್ರೆ ಮೂಲಕ ಕೊಡಗಿನ ಎರಡು ವಿಧಾನಸಭಾ ಕ್ಷೇತ್ರದ ಜನತೆಗೆ ಕುಮಾರಸ್ವಾಮಿ ಅವರ ಕೊಡುಗೆ ತಿಳಿಸುತ್ತೇವೆ ಎಂದು ತಿಳಿಸಿದರು.


ರಾಜ್ಯ ವಿದ್ಯಾರ್ಥಿ ದಳದ ಅಧ್ಯಕ್ಷ ಉಮೇಶ್ ಗೌಡ, ಮಾತನಾಡಿ, ಕುಮಾರಸ್ವಾಮಿ ಆಡಳಿತ ಅವಧಿಯಲ್ಲಿ ಸಂತ್ರಸ್ತರಿಗೆ ೯೦೦ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ೮೩೦ ಮನೆಗಳನ್ನು ಸಂತ್ರಸ್ತರಿಗೆ ನೀಡಲಾಗಿದೆ. ಇನ್ನೂ ೭೦ ಮನೆಗಳನ್ನು ಫಲಾನುಭವಿಗಳಿಗೆ ನೀಡದೆ ಸತಾಯಿಸಲಾಗುತ್ತಿದೆ. ತಕ್ಷಣವೇ ಸಂತ್ರಸ್ತರಿಗೆ ಮನೆ ಹಸ್ತಾಂತರ ಮಾಡದಿದ್ದಲ್ಲಿ ಜೆಡಿಎಸ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.


ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ವಕ್ತಾರ ಸಂಕೇತ್ ಪೂವಯ್ಯ, ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಾವತಿ ರಮೇಶ್, ಜಿಲ್ಲಾ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಾಸೀರ್ ಉಪಸ್ಥಿತರಿದ್ದರು.