ನ್ಯೂಸ್

2 ಸಂಚು ವಿಫಲ, ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು 3ನೇ ಸಂಚು ನಡೆದಿದೆ: ಎಚ್​ಡಿಕೆ ಆಕ್ರೋಶ

ಬೆಂಗಳೂರು: ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ ಸಂಚು ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್​ ಮೂಲಕ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

3ನೇ ಸಂಚು ಸಫಲಗೊಳಿಸಲು ಯತ್ನ

ಅಮುಲ್ ಜತೆ ನಂದಿನಿ ವಿಲೀನ ಎಂಬ ಕೇಂದ್ರ ಗೃಹ ಸಚಿವ ಅಮಿತ್​ ಷಾ ಹೇಳಿಕೆ ಮೊದಲನೇ ಸಂಚು, ಮೊಸರಿನ ಪ್ಯಾಕೆಟ್​ ಮೇಲೆ ಹಿಂದಿಯ ದಹಿ ಪದ ಮುದ್ರಣ ಎರಡನೇ ಸಂಚು. ಆದರೆ, ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಯಿತು. ಇದೀಗ 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ.

ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ

ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ ಎನ್ನುವುದು ಕೇಂದ್ರ ಸರಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್​​ಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ.

ಆಪೋಶನ ತೆಗೆದುಕೊಳ್ಳುವುದು ಖಚಿತ

ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್​​ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್​​ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ.

ಯಾರಿಗೂ ಹಿತವಲ್ಲ

ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ, ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ. ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ.

ಹಲವು ಅನುಮಾನ

ಬಿಜೆಪಿ ಡಬಲ್ ಎಂಜನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರ್ಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಅಸಹಕಾರವನ್ನೇ ನಂಬಿದೆ

ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್​​ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ.

ಕನ್ನಡಿಗರಿಗೆ ಋಣಿ

ಕನ್ನಡಿಗರಿಗೆ ಅಮುಲ್ ಋಣಿ ಇರಬೇಕು. ಎಚ್​.ಡಿ. ದೇವೇಗೌಡರು ಪ್ರಧಾನಿ ಆಗಿದ್ದಾಗ, ಎಚ್​.ಡಿ. ರೇವಣ್ಣ ಅವರು ಕೆಎಂಎಫ್ ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್​ಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ.

ಕೆಎಂಎಫ್​​ಗೆ ದೊಡ್ಡ ಖೆಡ್ಡಾ

ಅಷ್ಟೇ ಅಲ್ಲ,‌ ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್​ಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್​​ಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ.

ರೈತರ ಬದುಕನ್ನು ಕಾಪಾಡಬೇಕು

ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ-ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು.

ಕನ್ನಡಿಗರು ಸಿಡಿದೇಳಬೇಕು

ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್​ನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದು ಮಾಜಿ ಸಿಎಂ ಎಚ್​ಡಿಕೆ ಕರೆ ನೀಡಿದ್ದಾರೆ.