ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಗೌರವ ವಂದನೆ ಸ್ವೀಕರಿಸಿದರು.  
ನ್ಯೂಸ್

ಭತ್ತದ ಬೆಳೆ ಪ್ರೋತ್ಸಾಹಿಸಲು ಚಿಂತನೆ: ಸಚಿವ ಎಸ್.ಮಧು ಬಂಗಾರಪ್ಪ

ಶಿವಮೊಗ್ಗ: ಜಿಲ್ಲೆಯಲ್ಲಿ ಭತ್ತದ ಬೆಳೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಭತ್ತದ ಬೆಳೆಯನ್ನು ಪ್ರೋತ್ಸಾಹಿಸಲು ಚಿಂತನೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ನಗರದ ಡಿಎಆರ್ ಮೈದಾನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆಯಿಂದ ಆಯೋಜಿಸಿದ್ದ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಧಾನ ಹಾಗೂ ವಾಣಿಜ್ಯ ಬೆಳೆ ಅಡಕೆಗೆ ಎಲೆಚುಕ್ಕೆ ರೋಗ ಆತಂಕ ತಂದೊಡ್ಡಿದೆ. ಅಲ್ಲದೆ ಮಾರುಕಟ್ಟೆ ಸ್ಥಿರತೆಗಾಗಿ ಸರ್ಕಾರ ಪ್ರಯತ್ನಿಸಲಿದೆ ಎಂದರು.
ಪ್ರಸ್ತುತ ಮುಂಗಾರು ವಿಳಂಬವಾದರೂ ಜಿಲ್ಲೆಯಲ್ಲಿ ಬಿದ್ದಿರುವ ಮಳೆ ಪ್ರಮಾಣ ಪೂರ್ಣ ಅಲ್ಲದಿದ್ದರೂ ಸ್ವಲ್ಪಮಟ್ಟಿಗೆ ಸಮಾಧಾನ ತಂದಿದೆ. ಹಿಂಗಾರು ಮಳೆ ಮೇಲೆ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಬಿದ್ದಿರುವ ಮಳೆಯಿಂದ ಆಗಿರುವ ಜನ-ಜಾನುವಾರುಗಳ ಜೀವಹಾನಿ, ಬೆಳೆಹಾನಿಗಳ ಮಾಹಿತಿ ಸಂಗ್ರಹಿಸಿ ಸಂತ್ರಸ್ತರಿಗೆ ಕೂಡಲೇ ಪರಿಹಾರ ಬಿಡುಗಡೆಗೊಳಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿಗಳಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಮೇಯರ್ ಎಸ್.ಶಿವಕುಮಾರ್, ಮುಖಂಡರಾದ ಎಚ್.ಸಿ.ಯೋಗೇಶ್, ಎನ್.ರಮೇಶ್, ಎಸ್.ರವಿಕುಮಾರ್, ಎಸ್.ಜ್ಞಾನೇಶ್ವರ್, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ ಇತರರಿದ್ದರು.

ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ
ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶೇಷ ಆಸಕ್ತಿ ವಹಿಸಿದ್ದಾರೆ. ಅರಣ್ಯ ಮತ್ತು ಕಂದಾಯ ಇಲಾಖೆ ನಡುವಿನ ಭೂ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ ಮತ್ತು ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ನಗರದ ಪ್ರಮುಖ ಸ್ಥಳದಲ್ಲಿ ಜಿಲ್ಲಾಡಳಿತ ಭವನ ನಿರ್ಮಾಣ ಹಾಗೂ ಆಯುಷ್ ವಿಶ್ವವಿದ್ಯಾಲಯ ಆರಂಭಿಸಲು ಗಮನ ಹರಿಸಲಾಗುವುದು ಎಂದರು.