ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಪ್ರತ್ಯೇಕ ೩ ಅಪಘಾತದಲ್ಲಿ ಮಹಿಳಾ ಸ್‌ಟಾವೇರ್ ಇಂಜಿನಿಯರ್ ಸೇರಿ ಮೂವರು ಮೃತಪಟ್ಟಿದ್ದಾರೆ.
ವರ್ತೂರು ಮುಖ್ಯರಸ್ತೆಯಲ್ಲಿ ಸೋಮವಾರ ರಾತ್ರಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ದೀಪಿಕಾ (೨೭) ಎಂಬ ಸ್‌ಟಾವೇರ್ ಇಂಜಿನಿಯರ್ ಮೃತಪಟ್ಟಿದ್ದಾರೆ.
ಮೂಲತಃ ದಾವಣಗೆರೆ ಜಿಲ್ಲೆಯ ದೀಪಿಕಾ ಅವರು ನಗರದ ಚನ್ನಸಂದ್ರದಲ್ಲಿ ವಾಸವಾಗಿದ್ದರು. ರಾತ್ರಿ ಕೋರಮಂಗಲದಲ್ಲಿನ ಸ್ನೇಹಿತೆಯ ಮನೆಗೆ ಹೋಗಿದ್ದ ಅವರು, ಊಬರ್ ಆ್ಯಪ್‌ನಲ್ಲಿ ಬೈಕ್ ಬುಕ್ ಮಾಡಿಕೊಂಡು ಚನ್ನಸಂದ್ರದ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಜಾಗರೂಕತೆಯಿಂದ ಅತಿ ವೇಗವಾಗಿ ಟಿಪ್ಪರ್ ಚಾಲನೆ ಮಾಡುತ್ತಿದ್ದ ಚಾಲಕ ದೀಪಿಕಾ ಅವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಹಿಂದಿನಿಂದ ವಾಹನ ಗುದ್ದಿಸಿದ್ದಾನೆ. ಆಗ ಬೈಕ್‌ನಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಮಂಗಳವಾರ ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬೈಕ್ ಚಾಲಕ ಸಹ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಟ್‌ಫೀಲ್ಡ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಚಾಲಕನನ್ನು ಬಂಧಿಸಿ ವಾಹನ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದ್ವಿಚಕ್ರ ವಾಹನ ಗುದ್ದಿ ವೃದ್ಧೆ ಸಾವು:
ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಾಯಿತ್ರಿ (೬೯) ಎಂಬ ವೃದ್ಧೆ ಮೃತಪಟ್ಟಿದ್ದಾರೆ.
ಜಯನಗರ ೯ನೇ ಬ್ಲಾಕ್‌ನ ೧೮ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಜಯನಗರ ನಿವಾಸಿಯಾದ ಗಾಯಿತ್ರಿ ಅವರು ವಾಯುವಿಹಾರ ಮುಗಿಸಿಕೊಂಡು ಮನೆಗೆ ವಾಪಸ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ಗಾಯಿತ್ರಿ ಅವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೈಕೋ ಲೇಔಟ್ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ಸಾವು:
ಹೊಸಗುಡ್ಡದಹಳ್ಳಿಯ ಪೈಪ್‌ಲೈನ್ ರಸ್ತೆಯಲ್ಲಿ ಸರಕು ಸಾಗಣೆ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪೋತರಾಜು ಎಂಬುವರು ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಅವರು ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸುಮನಹಳ್ಳಿಯಲ್ಲಿ ವಾಸವಾಗಿದ್ದ ಅವರು ಕೆಲಸದ ನಿಮಿತ್ತ ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಸರಕು ಸಾಗಣೆ ವಾಹನದ ಚಾಲಕ ಅಜಾಗರೂಕತೆಯಿಂದ ಏಕಾಏಕಿ ಹಿಮ್ಮುಖವಾಗಿ ವಾಹನ ಚಾಲನೆ ಮಾಡಿ, ಪೋತರಾಜು ಅವರ ಬೈಕ್‌ಗೆ ವಾಹನ ಗುದ್ದಿಸಿದ್ದಾನೆ. ಆಗ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ಪೋತರಾಜು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಘಟನೆ ನಂತರ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಸಂಚಾರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.