ಸರಗೂರು ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. 
ನ್ಯೂಸ್

ಸರಗೂರಲ್ಲಿ ಕೆಎಸ್‌ಆರ್‌ಟಿಸಿ, ಖಾಸಗಿ ವಾಹನಗಳ ಸಂಚಾರ ಸ್ಥಗಿತ

ಸರಗೂರು: ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ವಿವಿಧ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ರಾಜ್ಯ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಪಟ್ಟಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ರಾಜ್ಯ ರೈತಸಂಘ, ಆದಿಕರ್ನಾಟಕ ಮಹಾಸಭಾ, ವರ್ತಕರ ಸಂಘ, ವಾಹನ ಚಾಲಕರ ಸಂಘ, ಬೀದಿ ವ್ಯಾಪಾರಿಗಳ ಸಂಘ.ದಸಂಸ (ಅಂಬೇಡ್ಕರ್ ವಾದ) ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವಿರುದ್ಧ ನಾನಾ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಬಂದ್ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಕೆಎಸ್‌ಆರ್‌ಟಿಸಿ ಬಸ್, ಖಾಸಗಿ ವಾಹನಗಳ ಸಂಚಾರವಿರಲಿಲ್ಲ. ಇನ್ನು ಮೆಡಿಕಲ್ ಸ್ಟೋರ್‌ಗಳು, ಪೆಟ್ರೋಲ್ ಬಂಕ್, ತರಕಾರಿ ಅಂಗಡಿಗಳನ್ನು ಹೊರತುಪಡಿಸಿ ವರ್ತಕರು ಅಂಗಡಿ ಮುಂಗ್ಗಟ್ಟು ಬಂದ್ ಮಾಡಿ ಬೆಂಬಲ ಸೂಚಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಸಿಂಗೇಗೌಡ, ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಆ ಮೂಲಕ ರಾಜ್ಯದ ರೈತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಕಿಡಿಕಾರಿದರು.

ವರ್ತಕರ ಸಂಘದ ಅಧ್ಯಕ್ಷ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಇಲ್ಲಿನ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಸರಗೂರು ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ ಮಾತನಾಡಿ, ರಾಜ್ಯದಲ್ಲಿ ಬರಗಾಲವಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಹೀಗಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಖಂಡನೀಯ ಎಂದರು.

ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಬಂದ್‌ಗೆ ಬೆಂಬಲ ನೀಡಿದ್ದರು. ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ಚೆನ್ನಿಪುರ ಮಲ್ಲೇಶ್, ವರ್ತಕರ ಸಂಘದ ಖಜಾಂಚಿ ಡಕ್ಲರಾಮ್, ಮಾಜಿ ಅಧ್ಯಕ್ಷ ಎಸ್.ವಿ.ಕೃಷ್ಣಚಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಜಿ.ಗೋಪಾಲಸ್ವಾಮಿ, ರೈತ ಸಂಘದ ಉಪಾಧ್ಯಕ್ಷ ಹಳೆಯೂರು ಗಣೇಶ್, ಕಾರ್ಯದರ್ಶಿ ಚೆನ್ನನಾಯಕ, ಯುವ ಘಟಕ ಸದಸ್ಯ ಬೀರೇಶ್, ವರ್ತಕರಾದ ಎಸ್.ಬಿ.ಬ್ರಹ್ಮದೇವ್, ಸತೀಶ್ ಕದಂಬ, ಪಟ್ಟಣ ಪಂಚಾಯಿತಿ ಸದಸ್ಯ ವೀರೇಶ್ ಇತರರಿದ್ದರು.