ನ್ಯೂಸ್

ಮುಷ್ಕರಕ್ಕೆ ಸಿದ್ದತೆ ನಡೆಸಿರುವ ಸಾರಿಗೆ ನೌಕರರು

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ದತೆ ನಡೆಸಿದ್ದಾರೆ. ಡಿಸೆಂಬರ್ ೩೧ ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ೯ ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಚಲೋ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಷ್ಕರದ ನೋಟಿಸ್ ನೀಡಲಾಗುತ್ತದೆ. ಕೈಗಾರಿಕಾ ವಿವಾದ ಕಾಯಿದೆ ಸೆಕ್ಷನ್-೨೨ ರ ಪ್ರಕಾರ ಮುಷ್ಕರಕ್ಕೂ ಮುನ್ನ ೨೧ ದಿನಗಳ ಮುಂಚಿತವಾಗಿ ನೋಟಿಸ್ ನೀಡಬೇಕು. ಈ ಹಿನ್ನೆಲೆಯಲ್ಲಿ ೯ ರಂದು ಸಿಎಂಗೆ ನೋಟಿಸ್ ಕೊಟ್ಟು ೩೧ ರಿಂದ ಸಾರಿಗೆ ಮುಷ್ಕರ ಮಾಡಲು ಯೋಜನೆ ಮಾಡಿಕೊಳ್ಳಲಾಗಿದೆ. ಆರು ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ಮಾಡಿಕೊಂಡಿದ್ದು, ಆ ಆರು ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ.

ಸಿದ್ದರಾಮಯ್ಯನವರು ನಿರ್ಲಕ್ಷ್ಯ ಮಾಡಿದರೆ ಬಸ್ ಸಂಚಾರ ಸ್ಥಗಿತಗೊಳ್ಳಲಿವೆ. ಈ ಹಿಂದೆಯೂ ಮೂರು ದಿನ ಮುಷ್ಕರ ಮಾಡಿದ ಮೇಲೆ ಸಿದ್ದರಾಮಯ್ಯ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದ್ದರು ಎಂದು ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಹೇಳಿದ್ದಾರೆ.

ಸರ್ಕಾರಕ್ಕೆ ನೌಕರರ ಎಚ್ಚರಿಕೆ

ಕೆಎಸ್‌ಆರ್‌ಟಿಸಿ ಮುಷ್ಕರ ಹೇಗೆ ನಡೆಯುತ್ತದೆ ಎಂಬುದು ನಿಮಗೆ ಗೊತ್ತಿದೆ. ನಮ್ಮನ್ನು ಕರೆದು ಬೆದರಿಸಿದರೆ ಮುಷ್ಕರ ವಾಪಸ್ಸು ಪಡೆಯಲು ಆಗದು. ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಮುಷ್ಕರ ನಿರ್ಧಾರ ಹಿಂಪಡೆಯುತ್ತೇವೆ. ನಮ್ಮ ಜಂಟಿ ಕ್ರಿಯಾ ಸಮಿತಿಯ ಎಲ್ಲಾ ಸಂಘಟನೆಗಳು ಒಪ್ಪಿಗೆ ಸೂಚಿಸಿವೆ. ನಮ್ಮ ಎಲ್ಲಾ ನೌಕರರು ಮುಷ್ಕರಕ್ಕೆ ಸಿದ್ಧರಾಗಲು ಸಮಾವೇಶ ಮಾಡುತ್ತೇವೆ. ಎಲ್ಲರಲ್ಲೂ ತಿಳಿವಳಿಕೆ ಮೂಡಿಸುತ್ತೇವೆ. ಬಹಳ ಯಶಸ್ವಿಯಾಗಿ ಮುಷ್ಕರ ಆಗಲಿದೆ. ನಮ್ಮ ತಾಳ್ಮೆ ಪರೀಕ್ಷಿಸಬೇಡಿ ಎಂದು ಸರ್ಕಾರಕ್ಕೆ ಸಾರಿಗೆ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.