ನ್ಯೂಸ್

ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಬೆಂಗಳೂರು: ಮಾದಕವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬನಶಂಕರಿಯ ಭರತ್ ಚಂದ್ರ (೨೫) ಮತ್ತು ಧನುಷ್ (೨೬) ಬಂಧಿತರು. ಆರೋಪಿಗಳಿಂದ ೧.೧೦ ಲಕ್ಷ ರೂ. ಮೌಲ್ಯದ ೨ ಕೆ.ಜಿ. ೧೨೭ ಗ್ರಾಂ ಗಾಂಜಾ, ಎಲೆಕ್ಟ್ರಾನಿಕ್ ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಬನಶಂಕರಿ ಅಗ್ನಿಶಾಮಕ ಠಾಣೆ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿರುವುದು ಕಂಡು ಬಂದಿದೆ. ಆರೋಪಿಗಳು ಡ್ರಗ್ಸ್ ಪೆಡ್ಲರ್‌ಗಳಾಗಿದ್ದು, ಹೊರರಾಜ್ಯಗಳಿಂದ ಕಡಿಮೆ ದರದಲ್ಲಿ ಗಾಂಜಾ ಖರೀದಿಸಿ ನಗರಕ್ಕೆ ತಂದು ಸ್ಥಳೀಯ ಗ್ರಾಹಕರಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.