ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ೯ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅವಲಹಳ್ಳಿಯ ತೌಸಿಫ್ ಅಲಿಖಾನ್(೩೩) ಬಂಧಿತ. ಆರೋಪಿಯು ೨೦೧೧ನೇ ಸಾಲಿನಲ್ಲಿ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿದ್ದ. ಬಳಿಕ ಜಾಮೀನು ಪಡೆದು ಹೊರಗೆ ಬಂದ ಬಳಿಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ೯ ವರ್ಷಗಳಿಂದ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಆರೋಪಿಯ ಬಂಧನಕ್ಕೆ ವಾರೆಂಟ್ ಜಾರಿ ಮಾಡಿತ್ತು.
ಈ ನಡುವೆ ಆರೋಪಿಯ ಬಂಧನಕ್ಕೆ ಬಸವನಗುಡಿ ಠಾಣೆ ಇನ್‌ಸ್ಪೆಕ್ಟರ್ ಸವಿತಾ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡವು ಆರೋಪಿ ತೌಸಿಫ್ ಅಲಿಖಾನ್ ಕೆ.ಆರ್.ಪುರ ಸಮೀಪದ ಅವಲಹಳ್ಳಿ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೌಡಿಶೀಟರ್ ಬಂಧನ:
ಮತ್ತೊಂದು ಪ್ರಕರಣದಲ್ಲಿ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ೬ ತಿಂಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯೋಗೇಶ್ ಅಲಿಯಾಸ್ ಟಾಟಾ ಕಿರಣ್(೨೭) ಬಂಧಿತ ರೌಡಿ ಶೀಟರ್. ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿಯು ಜಾಮೀನು ಪಡೆದು ಹೊರಗೆ ಬಂದು ಕಳೆದ ಆರು ತಿಂಗಳಿಂದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಸಂಬಂಧ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿತ್ತು. ಇದರ ಬೆನ್ನಲ್ಲೇ ಗಿರಿನಗರ ಠಾಣೆ ಪೊಲೀಸರು ಆರೋಪಿಯು ಕನಕಪುರದ ದೊಡ್ಡ ಆಲನಹಳ್ಳಿಯಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಆತನನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.