ಬೆಂಗಳೂರು: ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ನಗರದ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ವಿಷಯವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಇಬ್ಬರು ನಾಯಕರು, ದೇವೆಗೌಡರ ಆರೋಗ್ಯ ವಿಚಾರಿಸಿದ್ದು, ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಅತ್ಯಂತ ಲವಲವಿಕೆಯಿಂದ ಮಾತನಾಡಿದರು, ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸಿದರು.
ನಿನ್ನೆ (ಶನಿವಾರ, ಅ 11) ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯದ ಹಿರಿಯ ನಾಯಕನ ಆರೋಗ್ಯ ವಿಚಾರಿಸಿದ್ದರು.
ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಹಂಚಿಕೊಂಡಿರುವ ಮಾಜಿ ಬಿಎಸ್ವೈ, ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ನಮ್ಮ ದೇಶದ ಹಿರಿಯ ನಾಯಕರು ಹಾಗೂ ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಲಾಯಿತು. ದೇಶ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಸದ್ಯ ವೈದ್ಯರ ಚಿಕಿತ್ಸೆ ಬಳಿಕ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ.