ಲಖನೌ: ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ 9 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ನವಾಬ್ಗಂಜ್ನಲ್ಲಿ ಶುಕ್ರವಾರ ನಡೆದಿದೆ.
ಅವಘಡದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬಿಹಾರದ ಭೋಜ್ಪುರ ಮೂಲದವರಾಗಿದ್ದು, ತವರಿಗೆ ತೆರಳುವಾಗ ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಸಂಭವಿಸಿದೆ ಎಂದು ಪ್ರತಾಪಗಢ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರಿನ ಬಹುತೇಕ ಭಾಗ ನುಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರಕ್ಕೆ ತರೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುವುದಾಗಿ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಸಾವಿಗೆ ಕಂಬನಿ ಮಿಡಿದಿದ್ದು, ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. (ಏಜೆನ್ಸೀಸ್)