ನ್ಯೂಸ್

ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಆರೋಪಿಗೆ ನೋಟಿಸ್ ನೀಡಲು ಸಿದ್ದತೆ

ಬೆಂಗಳೂರು: ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ತನಿಖೆ ಕೈಗೊಂಡಿರುವ ಹೆಣ್ಣೂರು ಠಾಣೆ ಪೊಲೀಸರು, ಆರೋಪಿಗೆ ನೋಟಿಸ್ ನೀಡಲು ಮುಂದಾಗಿದ್ದಾರೆ.

ವಿನಯ್ ಅವರ ಡೊತ್‌ನೋಟ್ ಆಧರಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿನಯ್ ಅವರ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದ ಡೆತ್‌ನೋಟ್ ಅನ್ನು ಜಪ್ತಿ ಮಾಡಿಕೊಂಡು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ರವಾನೆ ಮಾಡಿದ್ದಾರೆ. ವಿನಯ್ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಯಾರಿಗೆಲ್ಲಾ ಕರೆ ಮಾಡಿದ್ದರು? ಯಾರೊಂದಿಗೆ ಎಷ್ಟು ಸಮಯ ಮಾತನಾಡಿದ್ದರು ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಮೊಬೈಲ್ ಕರೆಗಳ ವಿವರ ಪಡೆದುಕೊಳ್ಳುತ್ತಿದ್ದಾರೆ.

ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್‌ಗೌಡ ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಬೇಕು ಎಂದು ವಿನಯ್ ಸಹೋದರ ಜೀವನ್ ಅವರು ಎರಡನೇ ಬಾರಿಗೆ ದೂರು ನೀಡಿದ್ದಾರೆ. ಅವರ ದೂರನ್ನು ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.