ನ್ಯೂಸ್

ಗೌಡರ ಸಿದ್ಧಾಂತ ಎಲ್ಲಿ ಹೋಯಿತು?; ಡಿಕೆಶಿ ವ್ಯಂಗ್ಯ

ಶ್ರೀಕಾಂತ್ ಶೇಷಾದ್ರಿ

ಬೆಂಗಳೂರು: ಹಿರಿಯರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಏಕಾಂಗಿಯಾಗಿ ಹೋರಾಡುತ್ತೇವೆ ಎಂದಿದ್ದರು. ಹಾಗೆಂದಿದ್ದ ಅವರ ಮಾತು, ಅವರ ಸಿದ್ಧಾಂತ ಈಗ ಎಲ್ಲಿ ಹೋಯಿತು? ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಬಿಜೆಪಿ- ಜೆಡಿಎಸ್​ ಮೈತ್ರಿ ಮುನ್ನೆಲೆಗೆ ಬಂದ ಸಂದರ್ಭದಲ್ಲಿ ಡಿಕೆಶಿ ಈ ಅಭಿಪ್ರಾಯ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೆಡಿಎಸ್ ಏಕಾಂಗಿಯಾಗಿಯಾದರೂ ಚುನಾವಣೆ ಸ್ಪರ್ಧಿಸಲಿ, ಬಿಜೆಪಿ ಜೊತೆ ಮೈತ್ರಿಯಾದರೂ ಮಾಡಿಕೊಳ್ಳಲಿ. ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದರು.

ಮೈತ್ರಿಗೆ ಅಭ್ಯಂತರವಿಲ್ಲ

ನಾವು ಅವರ ಸುದ್ದಿಗೆ ಹೋಗಿಲ್ಲ. ಈ ಹಿಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಈ ಹಿಂದೆ ನೀಡಿದ್ದ ಹೇಳಿಕೆಗಳನ್ನು, ನಿಲುವುಗಳನ್ನು ಮಾಧ್ಯಮದವರು ಕೇಳಬೇಕು ಎಂದ ಅವರು ಜೆಡಿಎಸ್ ಬಿಜೆಪಿ ಮೈತ್ರಿಗೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಅವರ ರಾಜಕೀಯ ನಿಲುವುಗಳ ಬಗ್ಗೆ ಯಾವ ನಾಯಕರು ಪ್ರತಿಕ್ರಿಯೆ ನೀಡಬೇಕೋ ಅವರು ನೀಡುತ್ತಾರೆ. ಅವರ ರಾಜಕೀಯ ಅಸ್ತಿತ್ವಕ್ಕಾಗಿ ಅವರು ತೀರ್ಮಾನ ಮಾಡುತ್ತಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ತಿಳಿಸಿದರು.