ಲಖನೌ: ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮಗಳನ್ನು ಜಾರಿಗೊಳಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ.
ಇದೀಗ ಆಘಾತಕಾರಿ ಘಟನೆಯೊಂದರಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 35 ವರ್ಷದ ಮಹಿಳೆ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಭಾಗ್ಪತ್ ಜಿಲ್ಲೆಯಲ್ಲಿ ನಡೆದಿದೆ.
35 ವರ್ಷದ ವಿಚ್ಛೇದಿತ ಮಹಿಳೆಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಆಕೆಯ ನಂಬಿಕೆ ಗಳಿಸಿದ ನಾಲ್ವರು ಆರೋಪಿಗಳು ಬಳಿಕ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಚಾರ ಎಸಗಿದ್ದಾರೆ.
ಇದಾದ ಬಳಿಕ ಘಟನೆಯ ವಿಡಿಯೋವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿರುವ ಆರೋಪಿಗಳು ಬಳಿಕ ಮಹಿಳೆಗೆ ತೋರಿಸಿ ಬೆದರಿಕೆ ಒಡ್ಡಿ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾರೆ. ಇದಕ್ಕೆ ಒಪ್ಪದಿದ್ಧಾಗ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಮಹಿಳೆ ನೀಡಿದ ದೂರಿನನ್ವಯ ಸೌರಭ್, ಕಮಲ್, ಶುಭಂ, ಸಾಗರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು ಆರೋಪಿಗಳ ವಯಸ್ಸು ಸುಮಾರು 20ರಿಂದ 26 ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.
ಆರೋಪಿಗಳನ್ನು ಭಾರತ ದಂಡ ಸಂಹಿತೆ(IPC Section)ಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.