ರಾಣೆಬೆನ್ನೂರ: ಉತ್ತರ ಕರ್ನಾಟಕ ಪ್ರದೇಶದಲ್ಲಿ ಅಭಿವೃದ್ಧಿಯ ವೇಗ ಕುಂಠಿತವಾಗಿದೆ. ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉತ್ತರ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆಯಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ. ಕೃಷ್ಣೇಗೌಡ ಹೇಳಿದರು.
ನಗರದ ಮೃತ್ಯುಂಜಯ ಕಲ್ಯಾಣ ಮಂಟಪದಲ್ಲಿ ಭಾನುವಾರ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಏರ್ಪಡಿಸಿದ್ದ ರಾಜ್ಯ ಕಾರ್ಯಕಾರಣಿಯ ಚಿಂತನ ಮಂಥನ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಗಡಿಭಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿದಾಗ ಅಲ್ಲಿ ಇಂದಿಗೂ ಬಹಳಷ್ಟು ಮೂಲಭೂತ ಸಮಸ್ಯೆಗಳ ಕೊರತೆ ಕಂಡುಬಂದಿತು. ಈ ಹಿಂದೆ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿಯವರ ಅವಧಿಯಲ್ಲಿ ಹಾವೇರಿ ಜಿಲ್ಲೆಯು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಲಿಲ್ಲ. ರಾಜ್ಯದಲ್ಲಿ ಸರ್ಕಾರ ಬದಲಾದರೂ ರೈತರು, ಜನಸಾಮಾನ್ಯರ ಸಮಸ್ಯೆಗಳು ಹಾಗೇ ಉಳಿದುಕೊಂಡಿವೆ.
ಸರ್ಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ತಿಳಿಯದಂತಾಗಿದೆ. ಸ್ವಾರ್ಥಕ್ಕಾಗಿ ಜನಪ್ರತಿನಿಧಿಗಳು ಅಭಿವೃದ್ಧಿ ಕಡೆಗಣಿಸುತ್ತಿದ್ದಾರೆ. ಸಾಧಿಸಲಿಲ್ಲ. ಸರ್ಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ತಿಳಿಯದಾಗಿದೆ. ಸಂಘಟನೆಗಳು ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕಾಗಿದೆ. ಸಮಾಜದ ಅಭ್ಯುದಯಕ್ಕೆ ಶ್ರಮಿಸಬೇಕು. ಸಂಘಟನೆಗಳು ನಗರ ಪ್ರದೇಶಗಳಿಗೆ ಸೀಮಿತವಾಗದೆ ಗ್ರಾಮ ಮಟ್ಟದಲ್ಲಿಯೂ ಜನಪರ ಕೆಲಸ ಮಾಡಬೇಕು ಎಂದರು.
ಸ್ಥಳೀಯ ಶನೈಶ್ಚರ ಮಂದಿರದ ಶಿವಯೋಗಿ ಶಿವಾಚಾರ್ಯರು, ಬಂಕಾಪುರ ಅರಳೆಲೆ ಮಠದ ರುದ್ರಮುನಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಪರಶುರಾಮ ರಿತ್ತಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ನಗರದ ಕೆಇಬಿ ವಿನಾಯಕ ದೇವಸ್ಥಾನದ ಬಳಿಯಿಂದ ಸಮಾರಂಭದ ಸ್ಥಳದವರೆಗೂ ಸಕಲ ಮಂಗಲ ವಾದ್ಯಗಳೊಂದಿಗೆ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಜರುಗಿತು.