ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶ ಕಾಯ್ದಿರಿಸಿದೆ. ಅಲ್ಲದೆ, ಪ್ರಕರಣ ಸಂಬಂಧ ಈ ಹಿಂದೆ ವಿಧಿಸಿರುವ ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪಿ. ವೆಂಕಟೇಶ್ ದಳವಾಯಿ ವಾದ ಮಂಡಿಸಿ ರಾಹುಲ್ ಗಾಂಧಿ ಅವರು ವಿದೇಶದ ಭೇಟಿ ವೇಳೆ ಜಾತಿಯ ಕುರಿತು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿದ್ದ ಅರ್ಜಿದಾರರು ಮಾತಿನ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಆದರೆ, ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿರುವ ಯಾವುದೇ ಆರೋಪ ಸಂಬಂಧಿತ ಅಂಶಗಳಿಲ್ಲ. ನಮ್ಮ ಕಕ್ಷಿದಾರರ ಹೇಳಿಕೆಗೆ ಸಂಬಂಧಿಸಿದಂತೆ ಅಸಮಾಧಾನ ಆಗಿದ್ದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಬಹುದಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಲಾಗುವುದು ಎಂದು ಪೀಠಕ್ಕೆ ವಿವರಿಸಿದರು.