ನ್ಯೂಸ್

ಬಿಜೆಪಿಯಿಂದ ಯತ್ನಾಳ್​ ಉಚ್ಛಾಟನೆ; ರಾಜ್ಯಧ್ಯಕ್ಷ ವಿಜಯೇಂದ್ರ ಹೇಳಿದ್ದೇನು? | Vijayendra

ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.  ಇದೀಗ ಈ ವಿಚಾರದ ಬಗ್ಗೆ  ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ(Vijayendra) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿರುವ ವಿಜಯೇಂದ್ರ, ''ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್​ ಯತ್ನಾಳ್​ ಅವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ'' ಎಂದಿದ್ದಾರೆ.
ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ.
ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ  ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ.
ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ ಎಂದಿದ್ದಾರೆ.