ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ವರುಣದೇವ ಕೆಲವೆಡೆ ಕೃಪೆ ತೋರಿದ್ದಾನೆ. ಸಾಮಾನ್ಯವಾಗಿ ತಾಪಮಾನ ಹೆಚ್ಚಳವಾದಾಗ ಮಳೆ ಬರುವುದು ವಾಡಿಕೆ. ಅದರಂತೆ ರಾಜ್ಯದ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದರಂತೆ ಏಪ್ರಿಲ್ 29ರಿಂದ ಮೂರು ದಿನಗಳ ಕಾಲ ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನದಲ್ಲಿ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 01ರಿಂದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕೆಲವೆಡೆ ಈಗಾಗಲೇ ಹಗುರ ಮಳೆ ಸುರಿಯುತ್ತಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ. ಬಿಸಿಲು ಹೆಚ್ಚಳವಾದಂತೆ ಅಲ್ಲಲ್ಲಿ ಮಳೆಯೂ ಬರಲಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಏರಿಳಿತವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.