ಬೆಳಗಾವಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಮನಗರ, ಅಶೋಕ ನಗರ ಸೇರಿ ವಿವಿಧ ಪ್ರದೇಶಗಳ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಭಾನುವಾರ ಪರಿಶೀಲಿಸಿದರು.
ನಗರದ ವಿವಿಧ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಮತದಾರರ ಸೇರ್ಪಡೆ, ತಿದ್ದುಪಡಿ, ಒಂದು ಮತಕ್ಷೇತ್ರದಿಂದ ಇನ್ನೊಂದು ಮತಕ್ಷೇತ್ರಕ್ಕೆ ಬದಲಾವಣೆ, ಮತದಾರರ ಪಟ್ಟಿಯಿಂದ ಹೆಸರು ಕಡಿಮೆ ಮಾಡುವುದು ಸೇರಿದಂತೆ ಪ್ರತಿಯೊಂದು ಪರಿಷ್ಕರಣೆ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಿದರು.
ನಿಗದಿತ ನಮೂನೆಗಳಲ್ಲಿ ಮಾಹಿತಿ ಪಡೆದುಕೊಂಡು ಪಟ್ಟಿ ಪರಿಷ್ಕರಿಸಬೇಕು. ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿತರಾಗಿರುವ ಸಿಬ್ಬಂದಿ, ಮನೆ ಮನೆಗೆ ಭೇಟಿ ನೀಡಿ ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಬೇಕು ಎಂದು ಸಲಹೆ ನೀಡಿದರು. ಪಾಲಿಕೆಯ ಅಧಿಕಾರಿ ಪೀರಜಾದೆ ಹಾಗೂ ವಿವಿಧ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಅಂತಿಮ ಯಾದಿ ಪ್ರಕಟ: ಬೆಳಗಾವಿ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 511 ಮತಗಟ್ಟೆಗಳ ಅಂತಿಮ ಮತದಾರರ ಪಟ್ಟಿಗಳನ್ನು ಭಾನುವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ತಿಳಿಸಿದ್ದಾರೆ. ಮತದಾರರ ಕರಡು ಪಟ್ಟಿಯನ್ನು ನ. 11ರಂದು ಪ್ರಕಟಿಸಲಾಗಿತ್ತು. ಸಾರ್ವಜನಿಕರ ಆಕ್ಷೇಪಣೆ ಆಧರಿಸಿ ಸರಿಪಡಿಸಲಾಗಿರುವ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.
ಮತದಾರರ ಪಟ್ಟಿಗಳು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾಧಿಕಾರಿ ಕಚೇರಿ, ಜಿಪಂ ಸಿಇಒ ಕಚೇರಿ, ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳ ಕಾರ್ಯಾಲಯ, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿ ಹಾಗೂ ಎಲ್ಲ ತಹಸೀಲ್ದಾರ್ ಕಚೇರಿಯಲ್ಲಿ ಲಭ್ಯವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.