ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಹಾಗೂ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿನ ಗೊಂದಲ ಪರಿಹರಿಸಲು ಅಗ್ರಹಿಸಿ ಮೈಸೂರಿನ ಕುವೆಂಪು ನಗರ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು.
ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ಈಗಾಗಲೇ ಖಾಸಗಿ ಕಾಲೇಜುಗಳಲ್ಲಿ ಪಾಠ ಮುಗಿಸಿ ಆಂತರಿಕ ಪರೀಕ್ಷೆಗಳು ನಡೆಯುತ್ತಿವೆ. ಆದರೆ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪಾಠ ಮಾಡಲು ಶಿಕ್ಷಕರೇ ಇಲ್ಲದಂತಾಗಿದೆ. ಸರ್ಕಾರ ಬಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಪದವಿ ಕಾಲೇಜುಗಳಿಗೆ ಬಡ ರೈತ, ಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣವನ್ನು ಪಡೆದುಕೊಳ್ಳಲು ಬರುತ್ತಾರೆ. ಆದರೆ ಸರ್ಕಾರ ಅಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸದೆ ದ್ರೋಹ ಬಗೆಯುತ್ತಿದೆ. ಪ್ರತಿದಿನ ನಡೆಯುವ ಒಂದೇ ತರಗತಿಗಾಗಿ ಗಂಟೆಗಟ್ಟಲೆ ಪ್ರಯಾಣ ಮಾಡಿ ದೂರದ ಊರಿಂದ ವಿದ್ಯಾರ್ಥಿಗಳು ಬರುವ ಪರಿಸ್ಥಿತಿ ಉಂಟಾಗಿದೆ ಎಂದು ದೂರಿದರು.
ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದಿರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ಪಾಠಗಳು ಇನ್ನೂ ಆರಂಭವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಈ ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿದರು. ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಹೇಮಾ, ಅಭಿಷೇಕ್ ಇತರರಿದ್ದರು.