ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ದೇಶದ ಸಮಸ್ತ ಜನರು 3 ಬಾರಿ ಆಯ್ಕೆ ಮಾಡಿದ್ದಾರೆ. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿ ಬಜೆಟ್‌ನಲ್ಲೂ ತೆರಿಗೆಯಲ್ಲಿ ಪರಿವರ್ತನೆಯಾಗಿದೆ. ಕೃಷಿ ಕ್ಷೇತ್ರಕ್ಕೆ ಅನೇಕ ಕೊಡುಗೆ ನೀಡಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನರೇಂದ್ರ ಮೋದಿ ಪ್ರಧಾನಿಯಾಗಿ 11 ವರ್ಷ ಪೂರೈಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿದ ವಿಚಾರಕ್ಕೆ ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತದ ಸಮಗ್ರ ಅಭಿವೃದ್ಧಿಗೆ ಮೋದಿ ಶ್ರಮಿಸಿದ್ದಾರೆ. 10 ವರ್ಷದ ಅವರ ಕೆಲಸವನ್ನು ಜನರು ಪರಿಗಣಿಸಿ, ಮೂರನೇ ಬಾರಿಗೂ ಅಧಿಕಾರ ನೀಡಿದ್ದಾರೆ ಎಂದರು.
ಮೊದಲೆರಡು ಅವಧಿಯ 10 ವರ್ಷಗಳಲ್ಲಿ ಜನರ ಹಿತದೃಷ್ಟಿಯಿಂದ ಅನೇಕ ಯೋಜನೆಗಳು ಜಾರಿಗೆ ಬಂದಿವೆ. ಕಳೆದ ಒಂದು ವರ್ಷದಲ್ಲಿ ಬಹಳಷ್ಟು ಘಟನೆಗಳು ಜರುಗಿವೆ. ಅದನ್ನೆಲ್ಲ ಮೋದಿ ಸಮರ್ಥವಾಗಿ ಎದುರಿಸಿದ್ದಾರೆ. ಮುಂದೆಯೂ ಅನೇಕ ಯೋಜನೆ ಜಾರಿಗೆ ತರಲಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಒಂದು ವರ್ಷ ಪೂರೈಸಿದ್ದಕ್ಕೆ ಪ್ರತಿಕ್ರಿಯಿಸಿ, ನೆಹರು ಮತ್ತು ಇಂದಿರಾಗಾಂಧಿ ಅವರ ಬಳಿಕ ದೇಶದಲ್ಲಿ ದೀರ್ಘಕಾಲ ಆಡಳಿತ ಮಾಡಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಈ 11 ವರ್ಷಗಳಲ್ಲಿ ಹಲವಾರು ಯೋಜನೆಗಳು, ಅಭಿವೃದ್ಧಿ ಕಾರ್ಯಗಳು, ಯಾರೂ ನಿರೀಕ್ಷೆ ಮಾಡದಂತಹ ಸಮಗ್ರ ಭಾರತದ ಅಭಿವೃದ್ಧಿ, ವಿಕಸಿತ ಭಾರತದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.