ನ್ಯೂಸ್

ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ

ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಇರುವ ಸೌಲಭ್ಯಗಳನ್ನು ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿಯ ಅಲ್ಪಸಂಖ್ಯಾತರ ಅಭಿವೃದ್ಧಿ ಸಂಬಂಧಿಸಿದ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.

ಅಲ್ಪಸಂಖ್ಯಾತರಿಗೆ ಇರುವ ತೊಂದರೆಗಳ ಕುರಿತು ಪಟ್ಟಿ ಮಾಡಿ ಸಭೆಯಲ್ಲಿ ಮಂಡಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರಿಗೆ ಸೂಚನೆ ನೀಡಿದರು.

ಶಾಸಕ ತನ್ವೀರ್ ಸೇಠ್ ಮಾತನಾಡಿ, ಸಮುದಾಯಗಳ ನಡುವೆ ಅಸಮಾನತೆಯನ್ನು ಹೋಗಲಾಡಿಸಲು ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಈ ಸೌಲಭ್ಯಗಳನ್ನು ಅಲ್ಪಸಂಖ್ಯಾತರು ಬಳಸಿಕೊಳ್ಳಬೇಕು. ಆರೋಗ್ಯ ಶಿಕ್ಷಣ ಹಾಗೂ ಮೂಲ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಕಮಿಟಿಯಲ್ಲಿ ಇರುವ ಸದಸ್ಯರು ಜಿಲ್ಲೆಯಲ್ಲಿ ಪ್ರವಾಸ ಮಾಡಿ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಸಭೆಯಲ್ಲಿ ಚರ್ಚಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳ ಮಾಡಲು ಶಿಕ್ಷಣ ಇಲಾಖೆ ಕ್ರಮ ವಹಿಸಬೇಕು. ಉರ್ದು ಶಾಲೆಗಳಲ್ಲಿ ಮಕ್ಕಳಿಗೆ ಉರ್ದು ಭಾಷೆಯ ಜತೆಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಕಲಿಕೆಗೂ ಒತ್ತು ನೀಡಬೇಕು. ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಅಲ್ಪಸಂಖ್ಯಾತ ನಿರುದ್ಯೋಗ ಯುವಕರಿಗೆ ಸ್ವ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ ಕಲ್ಪಿಸಬೇಕು. ಇದರಿಂದ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗುತ್ತದೆ.

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿಲ್ಪಾ ಮಾತನಾಡಿ, ಮೈಸೂರು ಜಿಲ್ಲೆಯಲ್ಲಿ 3,61,778 ಅಲ್ಪಸಂಖ್ಯಾತರ ಸಂಖ್ಯೆ ಇದೆ. ಇವರಿಗೆ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.