ನ್ಯೂಸ್

ಆರೋಗ್ಯ ಕೇಂದ್ರಗಳಲ್ಲಿ ರೇಬೀಸ್ ಲಸಿಕೆ ಇರಲೇಬೇಕು- ರಾಹುಲ ಶಿಂಧೆ

ಬೆಳಗಾವಿ: ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ನಾಯಿ ಕಡಿತಕ್ಕೆ ತಕ್ಷಣವೇ ರೇಬೀಸ್ ಲಸಿಕೆ (ಎಆರ್‌ವಿ) ಲಭ್ಯವಾಗಬೇಕು. ಚಿಕಿತ್ಸೆಗಾಗಿ ಜನರು ಅಲೆದಾಡುವ ಪರಿಸ್ಥಿತಿ ನಿರ್ಮಿಸಬೇಡಿ ಎಂದು ವೈದ್ಯಾಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ನಾಯಿ ಕಡಿತದಿಂದಾಗುವ ಮರಣ ತಡೆಗಟ್ಟಲು ವೈದ್ಯಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದರ ಜತೆಗೆ ತುರ್ತು ಚಿಕಿತ್ಸೆ ನೀಡಲು ಲಸಿಕೆ ದಾಸ್ತಾನು ಇಟ್ಟುಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು. ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿ 5 ವರ್ಷದೊಳಗಿನ ಮಕ್ಕಳಿಗೆ ಲಸಿಕಾ ವೇಳಾಪಟ್ಟಿ ಪ್ರಕಾರ ಲಸಿಕೆ ನೀಡಿ ಪ್ರಗತಿ ಕುಂಠಿತವಾಗದಂತೆ ಪ್ರಗತಿ ಸಾಧಿಸಲು ಸೂಚನೆ ನೀಡಿದರು.

ಜಿಪಂ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ, ಚಿಕ್ಕೋಡಿ ಅಪರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಗಡೇದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೇಶವ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಚಾಂದನಿ ದೇವಡಿ ಇತರರಿದ್ದರು.