ಕೆ.ಆರ್.ನಗರ: ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಈ ಬಾರಿಯೂ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎಂದು ಕೆಪಿಸಿಸಿ ಸದಸ್ಯ ಸಿ.ಪಿ.ರಮೇಶ್‌ಕುಮಾರ್ ತಿಳಿಸಿದರು.
ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಹಾಡ್ಯ ಮಹಿಳೆ ಮೀಸಲು ಸಾಮಾನ್ಯ ಕ್ಷೇತ್ರದಿಂದ ಮಂಗಳಾ ಪ್ರಸಾದ್, ಮಂಚನಹಳ್ಳಿ ಕ್ಷೇತ್ರದಿಂದ ಇಂದ್ರೇಶ್, ದೊಡ್ಡಕೊಪ್ಪಲು ಕ್ಷೇತ್ರದಿಂದ ರಾಹುಲ್ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದಿಸಿ ಮಾತನಾಡಿದರು.
ಈ ಚುನಾವಣೆಯಲ್ಲಿ ಅಭ್ಯರ್ಥಿ ಪರವಾಗಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತದಾರರ ಮನೆ ಮನೆಗೆ ಹೋಗಿ ಸಿಎಂ ಸಿದ್ದರಾಮಯ್ಯ ಅವರು ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿ ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಮನವಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಪಕ್ಷದ ಅಭ್ಯರ್ಥಿಗಳು ಕಾರ್ಯಕರ್ತರು, ಮುಖಂಡರು ಸೇರಿದಂತೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಿದ್ದರಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ ಲಭಿಸಿದೆ. ಮುಂದಿನ ದಿನಗಳಲ್ಲಿ ನಡೆಯುವ ಸಹಕಾರ ಸಂಘಗಳ ಚುನಾವಣೆಯಲ್ಲೂ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಬೇಕು. ಪಕ್ಷದ ಸಂಘಟನೆಯನ್ನು ಮತ್ತಷ್ಟು ಸಧೃಢವಾಗಲು ಈ ಚುನಾವಣೆ ಬುನಾದಿಯಾಗಿದೆ ಎಂದರು.
ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಸಾಲಗಾರರಲ್ಲದ ಕೆ.ಆರ್.ನಗರ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಜಿ.ಪಂ.ಮಾಜಿ ಸದಸ್ಯೆ ಪುಷ್ಪಲತಾ ರಮೇಶ್ ಅವರನ್ನು ಅಧಿಕ ಮತದಿಂದ ಗೆಲ್ಲಿಸಿ ಎಂದರು.
ಬಳಿಕ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಡ್ಯ ಪ್ರಸಾದ್ ಮಾತನಾಡಿ, ಕ್ಷೇತ್ರದ ಶಾಸಕ ಡಿ.ರವಿಶಂಕರ್ ಮತ್ತು ಕೆಪಿಸಿಸಿ ಸದಸ್ಯ ದೊಡ್ಡಸ್ವಾಮೇಗೌಡ, ಸಿ.ಪಿ.ರಮೇಶ್ ಕುಮಾರ್, ತಾ.ಪಂ.ಮಾಜಿ ಸದಸ್ಯ ಹಾಡ್ಯ ಮಹದೇವಸ್ವಾಮಿ ಸೇರಿದಂತೆ ಕಾಂಗ್ರೆಸ್ ಪಕ್ಷ ಮೂರು ಬಾರಿ ನನ್ನನ್ನು ಗುರುತಿಸಿ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕನಾಗಿ ಮಾಡಿದ್ದರು. ಈ ಚುನಾವಣೆಯಲ್ಲಿ ನನ್ನ ಪತ್ನಿ ಮಂಗಳಾ ಪ್ರಸಾದ್ ಅವರಿಗೆ ಪಕ್ಷ ಬೆಂಬಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದರು.
ತಾಲೂಕು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ದೆಗ್ಗನಹಳ್ಳಿ ಆನಂದ್, ಮುಖಂಡರಾದ ಕೇಬಲ್ ಮಹದೇವ್, ಪಿ. ಮಹದೇವ್, ಹೊಸೂರು ಕಲ್ಲಹಳ್ಳಿ ಹೇಮಂತ್ ಇತರರಿದ್ದರು.