ಈಡಿಗ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಶ್ರೀನಿವಾಸ್  
ನ್ಯೂಸ್

ಈಡಿಗ ನೌಕರರ ರಾಜ್ಯಮಟ್ಟದ ಸಮಾವೇಶ ಶೀಘ್ರ

ನಂಜನಗೂಡು: ಶೀಘ್ರ ರಾಜ್ಯ ಮಟ್ಟದಲ್ಲಿ ಈಡಿಗ ನೌಕರರ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.

ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಂಘಟನೆ ವತಿಯಿಂದ ಆಯೋಜಿಸಿದ್ದ ನೌಕರರ ಸಭೆಯಲ್ಲಿ ಮಾತನಾಡಿದ ಅವರು, ಸೆ.20ರಂದು ಬೆಂಗಳೂರಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ ನೌಕರರ ವೆಬ್‌ಸೈಟ್ ಲೋಕಾರ್ಪಣೆ ಮಾಡಲಾಗುವುದು ಎಂದರು.

ನೌಕರರ ಸಂಘಟನೆಯ ಅಧ್ಯಕ್ಷನಾದ ನಂತರ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯದ ನೌಕರರನ್ನು ಒಗ್ಗೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಈಗಾಗಲೇ ಸುಮಾರು 3000 ನೌಕರರು ಸಂಘದಲ್ಲಿ ಆಜೀವ ಸದಸ್ಯತ್ವ ಪಡೆದುಕೊಂಡಿದ್ದು, ಅಂದಾಜು 20 ಸಾವಿರಕ್ಕೂ ಹೆಚ್ಚು ನೌಕರರನ್ನು ಒಂದೇ ವೇದಿಕೆಯಲ್ಲಿ ತರಬೇಕೆಂಬ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಲಭ್ಯವಿರುವ ತಂತ್ರಜ್ಞಾನವನ್ನು ಬಳಸಿಕೊಂಡು ಆನ್‌ಲೈನ್ ಮೂಲಕ ಸದಸ್ಯತ್ವ ಪಡೆಯುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನೌಕರ ಸಂಘದ ಕಾರ್ಯ ಚಟುವಟಿಕೆಗಳನ್ನು ರಾಜ್ಯಾದ್ಯಂತ ತಲುಪಿಸುವ ಉದ್ದೇಶವಿದೆ ಎಂದರು.

ರಾಜ್ಯದಲ್ಲಿ ಪ್ರಸ್ತುತ ಬೆರಣಿಕೆಯಷ್ಟು ಸಮುದಾಯದ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಸಮಾಜದ ಯುವಕ, ಯುವತಿಯರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗಂಭೀರವಾಗಿ ತಯಾರಾಗಬೇಕಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೌಕರರ ವಿದ್ಯಾವಂತ ಮಕ್ಕಳಿಗೆ ಉದ್ಯೋಗ ಮೇಳ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಜತೆಗೆ ಈಡಿಗ ನೌಕರ ಭವನ ನಿರ್ಮಿಸಲು ಸ್ಥಳ ಮಂಜೂರಾತಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ಲಭ್ಯವಾಗಿದೆ ಎಂದರು.

ಸಭೆಯಲ್ಲಿ ತಾಲೂಕು ಈಡಿಗರ ಸಂಘದ ಉಪಾಧ್ಯಕ್ಷ ಜಿ.ಕೆ.ಮಂಜುನಾಥ್, ಖಚಾಂಚಿ ನಾರಾಯಣ್ ಮೊದಲಾದವರು ಉಪಸ್ಥಿತರಿದ್ದರು.