ನವದೆಹಲಿ: ಕರೊನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಬರುವವರೆಗೆ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವಂತೆ ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಳ್ಳಿ ಹಾಕಿದೆ.
ಇದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಕೋರ್ಟ್ ಹೇಳಿದೆ. ‘ಯಾರಿಗೆ ಉಚಿತ ಚಿಕಿತ್ಸೆ ನೀಡಬೇಕೆಂಬುದನ್ನು ಸರ್ಕಾರ ನಿರ್ಧರಿಸಬೇಕು. ನಮ್ಮಲ್ಲಿ ಹಣವಿಲ್ಲ’ ಎಂದು ನ್ಯಾಯಮೂರ್ತಿ ಎನ್.ವಿ. ರಮಣ, ಎಸ್.ಕೆ. ಕೌಲ್ ಮತ್ತು ಬಿ.ಆರ್. ಗವಾಯಿ ಇದ್ದ ಪೀಠ ಹೇಳಿತು. ‘ಪ್ರಚಾರ ಹಿತಾಸಕ್ತಿಯ ಅರ್ಜಿಗಳನ್ನು ಸೃಷ್ಟಿಸಬೇಡಿ’ ಎಂದು ನ್ಯಾಯಮೂರ್ತಿಗಳು ಹೇಳಿದರು.
ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆ ನಡೆಸಿದ ಪೀಠ, ಕರೊನಾ ಪೀಡಿತರಿಗೆ ದೇಶದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎಂದಿತು. ದೆಹಲಿಯ ವಕೀಲ ಅಮಿತ್ ದ್ವಿವೇದಿ ಅರ್ಜಿ ಸಲ್ಲಿಸಿದ್ದರು.