ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನ ಭಾರಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆ ಅಬ್ಬರ ಮುಂದುವರಿದಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಮುಂದಿನ 48 ಗಂಟೆ ಹಾಗೂ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮುಂದಿನ 24 ಗಂಟೆ ಹಾಗೂ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಅ.15ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ೋಷಿಸಲಾಗಿದೆ. ಈ ಅವಧಿಯಲ್ಲಿ 204.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಜತೆಗೆ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮತ್ತಷ್ಟು ಭಾರಿ ಮಳೆಯಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಮುಂದಿನ 24 ಗಂಟೆ ಆರೆಂಜ್ ಅಲರ್ಟ್ ೋಷಿಸಲಾಗಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ ಮತ್ತು ತುಮಕೂರಿನಲ್ಲಿ ಅ.14ರಂದು ಯೆಲ್ಲೋ ಅಲರ್ಟ್ ಇರಲಿದೆ. ಕರಾವಳಿ ತೀರದಲ್ಲಿ ಗಂಟೆಗೆ 40-45 ಕಿಮೀ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.
ಪೂರ್ವದಿಂದ ಪಶ್ಚಿಮ ದಿಕ್ಕಿನ ಕಡೆ ಮಾರುತಗಳು ಚಲಿಸುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತ ಗೋವಾ ಮತ್ತಿತರ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ಇದರ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ಆದರೆ, ಒಂದು ವೇಳೆ ಗಾಳಿಯ ವೇಗ ಹೆಚ್ಚಾದರೆ ಚಂಡಮಾರುತ ಉಂಟಾಗುವ ಸಾಧ್ಯತೆ ಇದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.