ಬೆಳಗಾವಿ: ವಿಧಾನ ಪರಿಷತ್ ಚುನಾವಣೆಗೆ ಜಿಲ್ಲೆಯಿಂದ ನಾನೂ ಸಹ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಟಿಕೆಟ್ ನೀಡುವಂತೆ ವರಿಷ್ಠರಲ್ಲಿ ಕೇಳಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹೇಳಿದರು. ಜಿಲ್ಲೆಯ 2 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಆರು ತಿಂಗಳಿಂದ ತಯಾರಿ ಮಾಡಿಕೊಂಡಿದ್ದೇನೆ.
ಜಿಲ್ಲೆಯ 14 ತಾಲೂಕಿಗೂ ಭೇಟಿ ನೀಡಿ ಬೆಂಬಲಿಸುವಂತೆ ಎಲ್ಲರಲ್ಲೂ ಕೋರಿದ್ದೇನೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದರು. ಈ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗೆ ವರದಾನವಾಗಲಿದೆ.
ಸ್ಥಳೀಯ ಸಂಸ್ಥೆಗಳ ಎಲ್ಲ ಜನಪ್ರತಿನಿಧಿಗಳಿಗೂ ಭೇಟಿಯಾಗಿದ್ದೇನೆ. ಟಿಕೆಟ್ ಯಾರಿಗೆ ಸಿಕ್ಕರೂ ಅವರ ಗೆಲುವಿಗೆ ನಾನು ಶ್ರಮಿಸುತ್ತೇನೆ. ವಿವೇಕರಾವ್ ಪಾಟೀಲ ಕಾಂಗ್ರೆಸ್ ಟಿಕೆಟ್ ಕೇಳುತ್ತಿರುವುದರಲ್ಲಿ ತಪ್ಪಿಲ್ಲ. ಆದರೆ, ಎರಡು ಸ್ಥಾನಗಳ ಪೈಕಿ ಒಂದರಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಗ್ಗೆ ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಸಲ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಕ್ಕರೂ ಗೆಲುವು ನಿಶ್ಚಿತ ಎಂದರು.