ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಎಂಸಿಡಿಸಿಸಿ) ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಅಕ್ರಮ ನಡೆದಿದೆ. ಚುನಾವಣೆಯಲ್ಲಿ ಅಕ್ರಮ ನಡೆದಿರುವುದನ್ನು ಸ್ವತಃ ಸಚಿವ ಕೆ.ಎನ್.ರಾಜಣ್ಣ ಅವರೇ ಒಪ್ಪಿಕೊಂಡಿದ್ದಾರೆ. ಹೀಗಾಗಿ ಎಲ್ಲೆಲ್ಲಿ ಮತಗಳನ್ನು ಸೇರಿಸಿದ್ದಾರೆ, ಆ ಕ್ಷೇತ್ರಗಳಿಗೆ ಮರು ಚುನಾವಣೆ ಮಾಡುವಂತೆ ಎಂಸಿಡಿಸಿಸಿ ಮಾಜಿ ಅಧ್ಯಕ್ಷ ಹಾಗೂ ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಆಗ್ರಹಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನ್ಯಾಯಾಲಯಕ್ಕೆ ಹೋಗಿದ್ದೇವೆ. ಈ ಎಲ್ಲ ಸಾಕ್ಷೃಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ಸರ್ಕಾರ ಹೆಚ್ಚುವರಿ ಮತಗಳನ್ನು ಸೇರಿಸದಿದ್ದರೆ ಇಬ್ಬರು ಶಾಸಕರು ಹಾಗೂ ಮಾಜಿ ಶಾಸಕರು ಸೋಲುತ್ತಿದ್ದರು. ಅವರೆಲ್ಲರೂ ಗೆದ್ದಿರುವುದು ಒಂದೊಂದು ಮತಗಳಿಂದ. ಆದರೆ ಇದು ಅಕ್ರಮವಾಗಿ ಬಂದಿರುವ ಮತಗಳಾಗಿವೆ ಎಂದು ದೂರಿದರು.
ಯಾವ ನೈತಿಕತೆಯೂ ಉಳಿದಿಲ್ಲ: ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಕ್ರಮವಾಗಿರುವ ಬಗ್ಗೆ ಸ್ವತಃ ಸಚಿವ ರಾಜಣ್ಣ ಅವರೇ ಹೇಳಿದ್ದು, ಹೀಗಾಗಿ ಸಹಕಾರ ಸಚಿವ ರಾಜಣ್ಣ ಅವರಿಗೆ ಯಾವ ನೈತಿಕತೆಯೂ ಉಳಿದಿಲ್ಲ. ಹಾಗಂತ ನಾನು ಅವರ ರಾಜೀನಾಮೆ ಕೇಳುವುದಿಲ್ಲ, ಅದನ್ನು ಅವರ ಆತ್ಮಸಾಕ್ಷಿಗೆ ಬಿಡುತ್ತೇನೆ. ಆದರೆ ರಾಜ್ಯ ಸರ್ಕಾರ ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಸ್ಪಷ್ಟವಾಗಿ ಅಕ್ರಮ ನಡೆಸಿದೆ. ಸಹಕಾರ ಕ್ಷೇತ್ರವನ್ನೇ ಹಾಳು ಮಾಡಲು ಸಚಿವ ರಾಜಣ್ಣ ಹೊರಟಿದ್ದಾರೆ. ಹೀಗಾಗಿ ಸಚಿವ ರಾಜಣ್ಣ ನೀಡಿರುವ ಹೇಳಿಕೆಯನ್ನು ಕೋರ್ಟ್‌ಗೆ ಸಲ್ಲಿಸುತ್ತೇವೆ. ಈ ಬಗ್ಗೆ ನಾನು ಸದನದಲ್ಲೂ ಚರ್ಚೆ ಮಾಡುತ್ತೇನೆ ಎಂದರು.
ಸಿಎಂ ಪ್ರಭಾವ ಸಾಬೀತು: ಎಂಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಪ್ರಭಾವ ಬೀರಿರುವುದು ಸಚಿವ ರಾಜಣ್ಣ ಹೇಳಿಕೆಯಿಂದ ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯ ಮೇಲೆ ನನಗೆ ಅಪಾರ ಗೌರವವಿದೆ. ಆದರೆ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗಾಗಿ ಸಿಎಂ ಸಿದ್ದರಾಮಯ್ಯ ರಣತಂತ್ರ ರೂಪಿಸಿರುವುದನ್ನು ಸಚಿವ ರಾಜಣ್ಣ ಹೇಳಿದ್ದಾರೆ. ಸಿದ್ದರಾಮಯ್ಯ ಯಾವ ಉದ್ದೇಶದಿಂದ ಈ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ. ಆದರೆ ಸಹಕಾರ ಕ್ಷೇತ್ರಕ್ಕೆ ಅನಗತ್ಯವಾಗಿ ರಾಜಕೀಯ ಹಸ್ತಕ್ಷೇಪ ಮಾಡುವುದು ಅಪಾಯಕಾರಿ ಬೆಳವಣಿಗೆ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ತಿ.ನರಸೀಪುರ ಹಾಗೂ ನಂಜನಗೂಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೀನಾಯವಾಗಿ ಸೋಲು ಕಂಡಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಗಿರುವ ದೊಡ್ಡ ರಾಜಕೀಯ ಹಿನ್ನಡೆಯಾಗಿದೆ. ಇನ್ನು ಮುಂದಾದರೂ ಸಹಕಾರಿ ಕ್ಷೇತ್ರದಲ್ಲಿ ಪಾರದರ್ಶಕ ಆಡಳಿತ ನಡೆಸಲು ಸರ್ಕಾರ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.