ಬೆಂಗಳೂರು: ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಕಾರ್ಯಾಚರಣೆ ಸಂಬಂಧ ರಾಮನಗರ ತಹಸೀಲ್ದಾರ್ ನೀಡಿರುವ ನೋಟಿಸ್‌ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂಬ ಹಿಂದಿನ ಆದೇಶವನ್ನು ವಿಸ್ತರಿಸಿರುವ ಹೈಕೋರ್ಟ್, ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ತಹಸೀಲ್ದಾರ್ ನೋಟಿಸ್ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿತು. ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಕೀಲರು, ವಿಚಾರಣೆ ನಡೆಸದೆಯೇ ತಹಸೀಲ್ದಾರ್ ವರದಿ ಸಲ್ಲಿಸಿದ್ದಾರೆ. ಅಂತೆಯೇ, ಅರ್ಜಿಯಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ತಿದ್ದುಪಡಿ ಅರ್ಜಿಯನ್ನು ಮಾನ್ಯ ಮಾಡಲಾಗಿದೆ. ಹೀಗಾಗಿ, ಮೂಲ ಅರ್ಜಿಯ ಮೇಲೆ ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿ ಏ.4ಕ್ಕೆ ವಿಚಾರಣೆ ಮುಂದೂಡಿತು.