ಬೆಂಗಳೂರು
ವಿಶ್ವವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ) ನಡೆಸುವ ರಾಷ್ಟ್ರೀಯ ಪ್ರವೇಶ ಪರೀಕ್ಷೆ(ಎನ್‌ಇಟಿ)ಯನ್ನು ಕನ್ನಡ ಭಾಷೆಯಲ್ಲೇ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೇಂದ್ರ ಶಿಕ್ಷಣ ಸಚಿವರನ್ನು ಒತ್ತಾಯಿಸಿದೆ.
ಈ ಸಂಬಂಧ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಭರಣ ಕೇಂದ್ರ ಶಿಕ್ಷಣ ಸಚಿವ, ಯುಜಿಸಿ ಅಧ್ಯಕ್ಷರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಯುಜಿಸಿ ವರ್ಷದಲ್ಲಿ ಎರಡು ಬಾರಿ ಪರೀಕ್ಷೆ ನಡೆಸುತ್ತಾರೆ. ಆಂಗ್ಲ ಬಾಷೆಯಲ್ಲಿ ಪತ್ರಿಕೆ ಇರುವುದರಿಂದ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಸಾಕಷ್ಟು ತೊಂದರೆಯಾಗಲಿದ್ದು, ಈ ಬಗ್ಗೆ ಕೂಡಲೇ ಗಮನಹರಿಸಿ ಕನ್ನಡದಲ್ಲಿಯೂ ಪರೀಕ್ಷೆ ಎದುರಿಸಲು ಸಹಕಾರ ನೀಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು.
ರಾಜ್ಯ ಸರ್ಕಾರಗಳು ಪದವಿ ಕಾಲೇಜುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯನ್ನು ನಡೆಸುತ್ತದೆ. ಸದರಿ ನೇಮಕಾತಿಗೆ ಅರ್ಹತೆ ಪಡೆಯಲು ಪ್ರತಿ ಯುಜಿಸಿ ನಡೆಸುವ ಎನ್‌ಇಟಿ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಅವಶ್ಯಕವಾಗಿರುತ್ತದೆ. ಆದರೆ, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಪ್ರಾದೇಶಿಕ ಭಾಷೆಯಲ್ಲಿ ಇರದ ಕಾರಣ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಇದು ಸಂವಿಧಾನದ 14 ಮತ್ತು 15ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗುತ್ತದೆ ಎಂಬುದಾಗಿ ಕೇಂದ್ರ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಬರೆಯಲಾಗಿರುವ ಪತ್ರದಲ್ಲಿ ಅಧ್ಯಕ್ಷರು ತಿಳಿಸಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ಭಾರತ ಸರ್ಕಾರದ ಸಂವಿಧಾನದ 8ನೇ ಪರಿಚ್ಚೇದದಲ್ಲಿರುವ ಕನ್ನಡವೂ ಸೇರಿದಂತೆ 22 ಭಾಷೆಗಳಿಗೂ ಮಾನ್ಯತೆ ನೀಡಬೇಕಿದೆ. ಆ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ಬಲಗೊಳಿಸಬೇಕಿದೆ ಎಂದು ತಿಳಿಸಿದ್ದಾರೆ.