ನ್ಯೂಸ್

ಕೊಡಗು ಜಿಲ್ಲಾಧಿಕಾರಿ ವಿರುದ್ಧ ಅಸಮಾಧಾನ

ಮಡಿಕೇರಿ: ತಲಕಾವೇರಿ- ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ತೀರ್ಥೋದ್ಭವದಂದು ತಲಕಾವೇರಿ ಕ್ಷೇತ್ರದಲ್ಲಿ ಜನಸಂದಣಿ ಸೇರಿದ್ದಲ್ಲಿ ವ್ಯವಸ್ಥಾಪನಾ ಸಮಿತಿ ಹಾಗೂ ಸಮಿತಿಯ ಕಾರ್ಯನಿರ್ವಹಣಾಧಿಕಾರಿ ಹೊಣೆಗಾರರು ಎಂದು ಅಂತಿಮ ಕ್ಷಣದಲ್ಲಿ ನೋಟೀಸ್ ಜಾರಿದ್ದಕ್ಕೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಉಸ್ತುವಾರಿ ಸಚಿವ ವಿ.ಸೋಮಣ್ಣ, ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಹಾಗೂ ಡಿಸಿ ಅಧ್ಯಕ್ಷತೆಯಲ್ಲಿ ಮೂರು ಪೂರ್ವಭಾವಿ ಸಭೆ ನಡೆದಿತ್ತು. ಈ ಮೂರು ಸಭೆಯಲ್ಲಿ ಚರ್ಚಿಸಿ ತೆಗೆದುಕೊಂಡ ನಿರ್ಧಾರಕ್ಕೆ ವ್ಯತಿರಿಕ್ತವಾಗಿ ಡಿಸಿ ನೋಟೀಸ್ ಜಾರಿ ಮಾಡಿದ್ದಾರೆಂದು ಅತೃಪ್ತಿ ವ್ಯಕ್ತ ಪಡಿಸಿದ್ದಾರೆ.

ಬ್ರಹ್ಮಕುಂಡಿಕೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸೇರಿದ್ದರಿಂದ ಸ್ಥಳದಿಂದ ನಿರ್ಗಮಿಸಿದ್ದು, ಕ್ಷೇತ್ರ ವ್ಯಾಪ್ತಿಯಲ್ಲಿ ಇದ್ದಿದ್ದಾಗಿ ಸ್ಪಷ್ಟ ಪಡಿಸಿದ್ದಾರೆ.