ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಕ್ರೀಡಾಕೂಟದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ ಕ್ರೀಡಾ ಜ್ಯೋತಿ ಬೆಳಗಿಸಿದರು. ಬುಡಾ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ಜಿ.ಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ರಾಮೇಶ್ವರ ಉಕ್ಕಲಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು. 
ನ್ಯೂಸ್

ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ

ಬಾಗಲಕೋಟೆ: ಉತ್ತಮ ಆರೋಗ್ಯ ಹಾಗೂ ವ್ಯಕ್ತಿತ್ವ ಬೆಳೆವಣಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡಾಪಟುಗಳು ಜಿಲ್ಲೆಯಷ್ಟೆ ಅಲ್ಲದೇ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು. ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರವು ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡುತ್ತಿವೆ. ಪರಿಶಿಷ್ಟ ಜಾತಿ, ಪಂಗಡ ವರ್ಗದ ವಿದ್ಯಾರ್ಥಿಗಳ ಕ್ರೀಡಾಕೂಟ, ಸರ್ಕಾರಿ ನೌಕರರ, ಆರ್ ಆ್ಯಂಡ್ ಆರ್, ತಾಲೂಕಾ ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳನ್ನು ಆಯೋಜನೆ ಮಾಡಿದ್ದಾರೆ. ದೇಶದ ಕ್ರೀಡಾಪಟುಗಳು ಜಗತ್ತಿನ ತುಂಬೆಲ್ಲ ಬೆಳೆಕಿಗೆ ಬರುತ್ತಿದ್ದಾರೆ. ಅನೇಕರು ಕಂಚು, ಬೆಳ್ಳಿ ಹಾಗೂ ಚಿನ್ನದ ಪದಕಗಳನ್ನು ತೆಗೆದುಕೊಂಡು ಬರುತ್ತಿರುವದನ್ನು ನೋಡುತ್ತಿದ್ದೇವೆ ಎಂದರು.
ಜಿ.ಪಂ ಸಿಇಒ ಟಿ.ಭೂಬಾಲನ್ ಮಾತನಾಡಿ, ಗ್ರಾಮೀಣ ಭಾಗದ ಕಲೆ ಹಾಗೂ ಕ್ರೀಡೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕುಸ್ತಿ, ಕಬಡ್ಡಿಗಳಿಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ. ತಾಲೂಕಾ ಮಟ್ಟದಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಬಂದಿದ್ದು, ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಬುಡಾದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ಜಿ.ಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ರಾಮೇಶ್ವರ ಉಕ್ಕಲಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.