ನ್ಯೂಸ್

ಗಾಂಧೀಜಿ ಜನ್ಮದಿನ ಅರ್ಥಪೂರ್ಣ ಆಚರಣೆ,ಎಡಿಸಿ

ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಕ್ಟೋಬರ್ 2ರಂದು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಶಾಲಾ- ಕಾಲೇಜುಗಳಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಭಾವಚಿತ್ರಗಳಿಗೆ ಗೌರವ ಸಮರ್ಪಿಸುವ ಮೂಲಕ ಜಯಂತಿ ಆಚರಿಸಬೇಕು ಎಂದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂದು ಬೆಳಗ್ಗೆ 10ಕ್ಕೆ ಆಯೋಜಿಸುವ ಕಾರ್ಯಕ್ರಮದಲ್ಲಿ ಹಾಗೂ ಅದಕ್ಕೂ ಮುನ್ನ ಬೆಳಗ್ಗೆ 9ರಿಂದ 10ರವರೆಗೆ ಡಿಸಿ ಆವರಣದಲ್ಲಿ ನಡೆಯುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಬಂದಾಗ ಮೂಗು ಮುರಿಯುವಂಥ ಪರಿಸ್ಥಿತಿ ಇರಬಾರದು ಎಂದು ಅಧಿಕಾರಿಗಳನ್ನು ಎಚ್ಚರಿಸಿದರು.
ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು ಎಂದು ತಿಳಿಸಿದರು.
ವಿಜೇತ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಪ್ರಥಮ ಸ್ಥಾನ ಪಡೆದ ಪ್ರಬಂಧಗಳನ್ನು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಗೆ ಕಳುಹಿಸಿಕೊಡಲಾಗಿದೆ ಎಂದರು.
ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದೇರ್ರ್ಶಕ ರವಿಚಂದ್ರ ಇದ್ದರು.