ನ್ಯೂಸ್

ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಬಿ ವೃಂದಕ್ಕಾಗಿ ಪಾರದರ್ಶಕ ಪರೀಕ್ಷೆಗಾಗಿ ಕಟ್ಟುನಿಟ್ಟಿನ ಕ್ರಮ / ಜಿಲ್ಲಾಧಿಕಾರಿ ಅಕ್ರಂ ಪಾಷ

ವಿಜಯವಾಣಿ ಸುದ್ದಿಜಾಲ ಕೋಲಾರ
ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಬಿ ವೃಂದಕ್ಕಾಗಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಬುಧವಾರ ಗೆಜೆಟೆಡ್ ಪ್ರೊಬೆಷನರಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಗಸ್ಟ್ ೨೭ರಂದು ಜಿಲ್ಲೆಯಲ್ಲಿ ಒಟ್ಟು ೧೨ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಸುಮಾರು ೪೪೨೨ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳನ್ನು ಫ್ರಿಸ್ಕಿಂಗ್ ಒಳಪಡಿಸಲಾಗುವುದು. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಸಮರ್ಪಕವಾಗಿ ಕುಡಿಯುವ ಶುದ್ಧ ನೀರು, ಬೆಂಚ್, ಮಧ್ಯಾಹ್ನ ಬಿಸಿಯೂಟ, ಸಾರಿಗೆ ವ್ಯವಸ್ಥೆ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.

ಪರೀಕ್ಷಾ ದಿನದಂದು ಆಯಾ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ಜಿಲ್ಲೆಯ ಹಿರಿಯ ಅಧಿಕಾರಿಗಳು ವಿಶೇಷ ವಿಚಕ್ಷಣಾ ದಳದ ಕರ್ತವ್ಯಗಳನ್ನು ತಪ್ಪದೆ ನಿರ್ವಹಿಸಬೇಕು. ತಪ್ಪಿದಲ್ಲಿ ಪರೀಕ್ಷಾ ಮಂಡಳಿಯ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸುವುದರೊಂದಿಗೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಮಂಗಳ ಅವರು ಮಾತನಾಡಿ, ಪರೀಕ್ಷಾ ದಿನಗಳಂದು ಬೆಸ್ಕಾಂ ಇಲಾಖೆಯು ಸಮರ್ಪಕವಾಗಿ ವಿದ್ಯುತ್ ಪೂರೈಸುವುದರೊಂದಿಗೆ ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪರೀಕ್ಷಾ ಕೊಠಡಿ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಸ್ಥ್ಥಾನಿಕ ಜಾಗೃತ ದಳ ಹಾಗೂ ಮೊಬೈಲ್ ಸ್ವಾಧೀನ ದಳಗಳ ಅಧಿಕಾರಿಗೆಳು ತಮಗೆ ವಹಿಸಿದ ಕರ್ತವ್ಯಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ ಕ್ಯಾಮರಾಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಕುರಿತು ನಿಗಾ ವಹಿಸಬೇಕು ಎಂದರು.

ಬಾಡಿ ಕ್ಯಾಮೇರಗಳನ್ನು ಅಳವಡಿಸಲಾಗುತ್ತದೆ. ನಿರಂತರ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ವಿದ್ಯುತ್ ತೊಂದರೆಯಾಗದ ರೀತಿ ಜನರೇಟರ್ ಇಲ್ಲವೆ ಯು.ಪಿ.ಎಸ್ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷೆ ಕೊಠಡಿಯ ಹೊರಗಡೆಯ ೨೦೦ಮೀ ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಷೆ ಜಾರಿ ಇದ್ದು, ಅದಕ್ಕೆ ಅವಶ್ಯಕವಾದ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲು ಪೊಲೀಸ್ ಅಧಿಕಾರಿಗಳು ಸಹಕಾರ ಕೋರುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಧಿಕಾರಿ ಬಿ.ನಿಖಿಲ್ ಹೆಸ್ಕಾಂ ಅಧಿಕಾರಿಗಳು, ಎಲ್ಲಾ ಬಿ.ಇ.ಒಗಳು, ಬಿ.ಆರ್.ಸಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ ೨೧ ಕೆ.ಎಲ್.ಆರ್. ೦೬ : ನಗರದ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಬುಧವಾರ ಗೆಜೆಟೆಡ್ ಪ್ರೊಬೆಷನರಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅಕ್ರಂಪಾಷ, ಅಪರ ಜಿಲ್ಲಾಧಿಕಾರಿ ಮಂಗಳ, ಎಸ್.ಪಿ. ಬಿ.ನಿಖಿಲ್ ಇದ್ದರು.