ಮೈಸೂರು : ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರದ ವತಿಯಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಬದ್ಧನಾಗಿದ್ದೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ಭರವಸೆ ನೀಡಿದರು.
ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಕ್ರೀಡೆ, ಎನ್‌ಎಸ್‌ಎಸ್, ಸೇವಾದಳ, ರೆಡ್‌ಕ್ರಾಸ್ ಮತ್ತು ವಿದ್ಯಾರ್ಥಿ ಸಂಘಕ್ಕೆ ಚಾಲನೆ ನೀಡಲು ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಕಾಲೇಜುಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಬಡತನ ಹಿನ್ನೆಲೆಯಿಂದ ಬಂದಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆ ಇದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಉತ್ತಮ ಅಂಕ ಗಳಿಸುವುದರೊಂದಿಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಆ ಮೂಲಕ ಓದಿದ ಕಾಲೇಜಿಗೂ, ಪಾಲಕರಿಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಎಂ.ವಿ.ಹನುಮಂತರಾವ್ ಮಾತನಾಡಿ, ಸರ್ಕಾರಿ ಕಾಲೇಜುಗಳು ಎಂದರೆ ಎಲ್ಲರೂ ಹಿಂಜರಿಯುತ್ತಾರೆ. ಸರ್ಕಾರಿ ಕಾಲೇಜುಗಳಲ್ಲಿಯೂ ಸಹ ಅತ್ಯುತ್ತಮ ಶಿಕ್ಷಣ ಸಿಗುತ್ತದೆ ಎಂಬುದನ್ನು ತೋರಿಸುವ ಸಲುವಾಗಿ ಕಾಲೇಜಿನಲ್ಲಿ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ವಿದ್ಯಾರ್ಥಿಗಳು ಇದನ್ನು ಮನಗಂಡು ಇವುಗಳನ್ನು ಸದ್ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು. ಅಲ್ಲದೆ ವಿದ್ಯಾರ್ಥಿಗಳಿಗೆ ಶಾಲಾ ಕೊಠಡಿ, ಲ್ಯಾಬ್‌ಗಳ ಕೊರತೆಯಿದ್ದು, ಸರ್ಕಾರದಿಂದ ಮಂಜೂರು ಮಾಡಿಸಿಕೊಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಲಾಯಿತು.
ಪುರಸಭಾ ಸದಸ್ಯರಾದ ಹಾಗೂ ಸಿಡಿಸಿ ಅಧ್ಯಕ್ಷ ಎಚ್.ಸಿ.ನರಸಿಂಹಮೂರ್ತಿ, ಸುಹಾಸಿನಿ ದಿನೇಶ್, ತಿ.ನರಸೀಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಎಂ.ಜಿ.ರಮಾನಂದ ಇತರರು ಇದ್ದರು.