ಬೆಂಗಳೂರು: ಮಸ್ಲಿಂ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ಪೀಠಾಧ್ಯಕ್ಷ ಚಂದ್ರಶೇಖರ ಸ್ವಾಮೀಜಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಚಂದ್ರಶೇಖರ ಸ್ವಾಮೀಜಿಗೆ ಡಿ.೨ರಂದು ವಿಚಾರಣೆಗೆ ಹಾಜರಾಗುವಂತೆ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಇತ್ತೀಚೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾರತೀಯ ಕಿಸಾನ್ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಚಂದ್ರಶೇಖರ ಸ್ವಾಮೀಜಿ ಅವರು ಮಾತನಾಡಿ, ಮುಸ್ಲಿಂ ಸಮುದಾಯಕ್ಕೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಸಂಬಂಧ ಚಾಮರಾಜಪೇಟೆ ನಿವಾಸಿ ಸೈಯದ್ ಅಬ್ಬಾಸ್ ಎಂಬುವವರು ನೀಡಿದ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪದಡಿ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಆರೋಪದ ಸಂಬಂಧ ಡಿ.೨ರಂದು ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರ ಸ್ವಾಮೀಜಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.