ನ್ಯೂಸ್

ಚಾಮುಂಡೇಶ್ವರಿ ವರ್ಧಂತಿ ಉತ್ಸವ

ಬೆಟ್ಟದ ತಾಯಿ ನಾಡದೇವತೆ ಶ್ರೀಚಾಮುಂಡೇಶ್ವರಿ ದೇವಿಯ ವರ್ಧಂತಿ ಗುರುವಾರ ನಡೆಯಲಿದ್ದು, ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ವರ್ಧಂತಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನೆರವೇರಲಿವೆ.

ದೇವಸ್ಥಾನದಲ್ಲಿ ಮುಂಜಾನೆ 4 ಗಂಟೆಯಿಂದ ವಿವಿಧ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿವೆ. ದೇವಿ ಮೂರ್ತಿಗೆ ಅಭ್ಯಂಜನ ಬಳಿಕ ಅಲಂಕಾರಗಳೊಂದಿಗೆ ಪೂಜೆ ನೆರವೇರಿಸಲಾಗುತ್ತದೆ. ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿದಂತೆ ವಿವಿಧ ಪೂಜೆಗಳನ್ನು ಕೈಗೊಳ್ಳಲಾಗುತ್ತದೆ. ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾಕುಮಾರಿ ಒಡೆಯರ್ ಚಾಮುಂಡಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಹಾಮಂಗಳಾರತಿ ಬಳಿಕ ಉತ್ಸವ ಮೂರ್ತಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಇರಿಸಿ, ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಗುತ್ತದೆ. ಮತ್ತೆ ದೇವಸ್ಥಾನದ ಮುಂಭಾಗ ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಗುತ್ತದೆ. ಅರಮನೆ ಪೊಲೀಸ್ ಬ್ಯಾಂಡ್ ಜತೆಗೆ ಮಂಗಳವಾದ್ಯ, ಛತ್ರಿ, ಚಾಮರಗಳೊಂದಿಗೆ ಮೆರವಣಿಗೆ ನಡೆಯಲಿದೆ. ರಾತ್ರಿ 8.30ಕ್ಕೆ ಉತ್ಸವ ಪೂಜೆ, ದರ್ಬಾರ್ ಉತ್ಸವ, ಮಂಟಪೋತ್ಸವ ನಡೆಸಿ, ರಾಷ್ಟ್ರಾಶೀರ್ವಾದದೊಂದಿಗೆ ವರ್ಧಂತಿ ಉತ್ಸವ ಸಂಪನ್ನಗೊಳ್ಳಲಿದೆ.

ವರ್ಧಂತ್ಸುತ್ಸವದ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ಜುಲೈ 17ರಂದು ಬೆಳಗ್ಗೆ 8 ಗಂಟೆಯಿಂದ ಕೆಎಸ್‌ಆರ್‌ಟಿಸಿ ಬಸ್ ಕಾರ್ಯಾಚರಣೆ ಆರಂಭವಾಗಲಿದೆ. ಚಾಮುಂಡಿ ಬೆಟ್ಟದ ಮೆಟ್ಟಿಲುಗಳ ಮೂಲಕ ಬರುವ ಭಕ್ತರಿಗೂ ಬೆಳಗ್ಗೆ 8 ಗಂಟೆಯಿಂದ ಪ್ರವೇಶ ಕಲ್ಪಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆಯಲ್ಲಿ ತಿಳಿಸಿದೆ.

ವರ್ಧಂತಿ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಲಕ್ಷಾಂತರ ಭಕ್ತರು, ಗಣ್ಯರಿಗೆ ಅನುಕೂಲ ಒದಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ.