ನ್ಯೂಸ್

ಜ.೨೦ ರಂದು ಗೌಡ ಸಂಘಟನೆಗಳಿಂದ ಪ್ರತಿಭಟನೆ

ಮಡಿಕೇರಿ: ಅರೆಭಾಷಿಕ ಗೌಡ ಜನಾಂಗವನ್ನು ತೇಜೋವಧೆ ಮಾಡಿದವರ ವಿರುದ್ಧ ದೂರು ನೀಡಿದ್ದರೂ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದನ್ನು ಖಂಡಿಸಿ ವಿವಿಧ ಗೌಡ ಸಂಘಟನೆಗಳಿಂದ ಜ.೨೦ ರಂದು ಮಡಿಕೇರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಗಳ ಪ್ರಮುಖರು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಕೊಡಗು ಗೌಡ ಯುವ ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ ಮಾತನಾಡಿ, ನಗರದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಯಾವುದೇ ಘೋಷಣೆಗಳನ್ನು ಕೂಗದೆ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಪ್ರಚೋದನೆಯ ಹೇಳಿಕೆಗಳನ್ನು ನೀಡಿ ಶಾಂತಿ ಕದಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಜನಾಂಗದ ನಿಂದನೆ, ಅಪಮಾನ, ಕಪೋಲ ಕಲ್ಪಿತ ಇತಿಹಾಸ ಸೃಷ್ಟಿಸಿ ಪ್ರಚೋದನೆ ನೀಡಿದ ಆರೋಪದಡಿ ಸಂಘಟನೆಯ ನಾಯಕರೊಬ್ಬರ ವಿರುದ್ಧ ಮಡಿಕೇರಿ ನಗರ ಪೋಲಿಸ್ ಠಾಣೆ ಹಾಗೂ ಪೋಲಿಸ್ ಅಧೀಕ್ಷಕರಿಗೂ ದೂರು ನೀಡಲಾಗಿತ್ತು. ಆದರೆ, ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಅವರ ಅನುಯಾಯಿಗಳು ಪೊನ್ನಂಪೇಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮತ್ತೆ ಗೌಡ ಜನಾಂಗವನ್ನು ತೇಜೋವಧೆ ಮಾಡಿದ್ದಾರೆ. ಈ ಕುರಿತು ದೂರು ನೀಡಿದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದಕ್ಕೆ ಪ್ರಭಾವಿ ವ್ಯಕ್ತಿಗಳ ಕೈವಾಡವೇ ಕಾರಣವಿರಬಹುದು ಎನ್ನುವ ಅನುಮಾನ ಮೂಡುತ್ತಿದೆ ಎಂದು ರಿಶಿತ್ ಮಾದಯ್ಯ ಆರೋಪಿಸಿದರು.

ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು. ತಪ್ಪಿದಲ್ಲಿ ಪ್ರಚೋದನಾಕಾರಿ ಹೇಳಿಕೆಗಳು ನಿರಂತರವಾಗಿ ಬರುತ್ತಲೇ ಇರುತ್ತವೆ ಎಂದು ಒತ್ತಾಯಿಸಿದರು.

ಕುಶಾಲನಗರ ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ ಮಾತನಾಡಿ, ಕಟ್ಟೆಮಾಡು ದೇವಾಲಯದ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಶಾಂತಿಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇದಕ್ಕೆ ಬೆಲೆ ನೀಡದ ಕೆಲವರು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಒಕ್ಕಲಿಗ ಗೌಡ ಮತ್ತು ಅರೆಭಾಷೆ ಗೌಡರ ನಡುವೆ ದ್ವೇಷ ಬಿತ್ತುವ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪೊನ್ನಂಪೇಟೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿರುವ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕುಶಾಲನಗರ ಗೌಡ ಯುವಕ ಸಂಘದ ನಿರ್ದೇಶಕ ಪೆರುಬಾಯಿ ನವೀನ್, ಕೊಡಗು ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಬೈತಡ್ಕ ಜಾನಕಿ ಬೆಳ್ಳಿಯಪ್ಪ ಹಾಗೂ ನಿದೇಶಕರಾದ ಕರ್ಣಯ್ಯನ ಗುಲಾಬಿ ಉಪಸ್ಥಿತರಿದ್ದರು.