ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಜಿ.ವಿ.ಸೀತಾರಾಮ್ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೋರಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆಯಲಾಗಿದೆ.
ಜಿ.ವಿ.ಸೀತಾರಾಮ್ ಅವರು ಒಂದು ಸಮುದಾಯದ ವಿರುದ್ಧ ಜಾತಿ ನಿಂದನೆ ಹಾಗೂ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಗಂಭೀರವಾದ ಮುಜುಗರ, ಸಾರ್ವಜನಿಕ ಪ್ರತಿರೋಧ ವ್ಯಕ್ತವಾಗಿದೆ. ಎಫ್‌ಐಆರ್ ಕೂಡ ದಾಖಲಾಗಿದೆ. ಜತೆಗೆ ಅವರ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿ.ವಿ.ಸೀತಾರಾಮ್ ವಿರುದ್ಧ ತುರ್ತು ಕ್ರಮ ಕೈಗೊಳ್ಳುವಂತೆ ಎಚ್.ಡಿ. ಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಒತ್ತಾಯದ ಪತ್ರ ನೀಡಿದ್ದಾರೆ. ಈ ಸಂಬಂಧ ಪಕ್ಷ ತುರ್ತು ಕ್ರಮ ಕೈಗೊಳ್ಳುವಂತೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪತ್ರದಲ್ಲಿ ಕೋರಿದೆ.