ನ್ಯೂಸ್

ಜಿಲ್ಲಾಡಳಿತದಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ

ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ ಬಳಿಕ ಶುಕ್ರವಾರ ನಗರದಲ್ಲಿ ಕನ್ನಡ ಕಂಪು ಪಸರಿಸಿತು.

ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ ಬಳಿಕ ಶುಕ್ರವಾರ ನಗರದಲ್ಲಿ ಕನ್ನಡ ಕಂಪು ಪಸರಿಸಿತು. ಜಿಲ್ಲಾಡಳಿತದಿಂದ ಓವೆಲ್ ಮೈದಾನದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಅರಮನೆ ಆವರಣದಲ್ಲಿ ಶ್ರೀ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.

ಬಳಿಕ ಓವೆಲ್ ಮೈದಾನದಲ್ಲಿ ಸಿದ್ಧಪಡಿಸಿದ್ದ ವೇದಿಕೆಯಲ್ಲಿ ಶ್ರೀ ಭುವನೇಶ್ವರಿ ದೇವಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಆಕರ್ಷಕ ಪಥ ಸಂಚಲನದಿಂದ ಗೌರವ ವಂದನೆ ಸ್ವೀಕರಿಸಿ, ತೆರೆದ ವಾಹನದಲ್ಲಿ ತೆರಳಿ ತುಕಡಿಗಳ ಪರಿವೀಕ್ಷಣೆ ನಡೆಸಿದರು. ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜಾರೋಹಣ ನೆರವೇರಿಸಿದ ಬಳಿಕ ಪೊಲೀಸ್ ಬ್ಯಾಂಡ್‌ನಿಂದ ರಾಷ್ಟ್ರಗೀತೆ ಮತ್ತು ನಾಡಗೀತೆ ಮೊಳಗಿತು.

ಪರೇಡ್‌ನಲ್ಲಿ ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ, ನಗರ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಗರ ನಾಗರಿಕ ಪಡೆ, ಮಹಿಳಾ ಪೊಲೀಸ್ ಪಡೆ, ಅಶ್ವದಳ, ಅಗ್ನಿಶಾಮಕ ದಳ, ಪೊಲೀಸ್ ಬ್ಯಾಂಡ್ ಸೇರಿದಂತೆ 18 ತಂಡಗಳು ಭಾಗಿಯಾಗಿ ಆಕರ್ಷಕ ಪಥ ಸಂಚಲನ ನಡೆಸಿದವು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಜನತೆಗೆ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ವಿವಿಧ ಕ್ಷೇತ್ರದ 69 ಸಾಧಕರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ 14 ಸಾಧಕರು ಹಾಗೂ ಎರಡು 2 ಸಂಸ್ಥೆಗಳಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಇದೇ ಅಭಿನಂದಿಸಲಾಯಿತು. ಶಾಸಕ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಉಪ ವಿಭಾಗಾಧಿಕಾರಿ ರಕ್ಷಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸುದರ್ಶನ್ ಇತರರು ಇದ್ದರು.

ಗಮನ ಸೆಳೆದ ಮೆರವಣಿಗೆ

ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಓವೆಲ್ ಮೈದಾನದವರೆಗೆ ನಡೆದ ಭುವನೇಶ್ವರಿ ದೇವಿಯ ಮೆರವಣಿಗೆ ಗಮನ ಸೆಳೆಯಿತು. ಈ ವೇಳೆ ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಿದವು. ಪೂಜಾ ಕುಣಿತ, ಡೊಳ್ಳು ಕುಣಿತಾ ಸೇರಿದಂತೆ ವಿವಿಧ ಕಲಾತಂಡಗಳು ಮೆರುಗು ನೀಡಿದವು.