ವಿಜಯವಾಣಿ ಸುದ್ದಿಜಾಲ ಕೋಲಾರ
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಲು ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಸ್ಪರ್ಧೆಗಳನ್ನು ವಿದ್ಯಾಸಂಸ್ಥೆಗಳಲ್ಲಿ ಏರ್ಪಡಿಸಬೇಕು ಎಂದು ಸೂಚನೆ ನೀಡಿದರು.
ಈಗಾಗಲೇ ಕೆಲವು ವಿದ್ಯಾಸಂಸ್ಥೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇವುಗಳು ಎಷ್ಟು ಪ್ರಮಾಣದಲ್ಲಿ ಉಪಯುಕ್ತವಾಗುತ್ತಿವೆ ಎಂಬ ಬಗ್ಗೆಯೂ ಮಾಹಿತಿ ಕಲೆ ಹಾಕಬೇಕು ಎಂದರು.
ತAಬಾಕು ಉತ್ಪನ್ನಗಳು ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾಗುತ್ತಿದ್ದಾರೆ. ಇವರಿಗೂ ಸಹ ಅರಿವು ಮೂಡಿಸುವುದು ಸೇರಿದಂತೆ ಮನಪರಿವರ್ತಿತ ಕಾರ್ಯಕ್ರಮಗಳನ್ನು ಕಾರ್ಮಿಕ ಇಲಾಖೆಯ ವತಿಯಿಂದ ಅವರು ಕಾರ್ಯನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಹಮ್ಮಿಕೊಂಡು ಇವುಗಳಿಂದ ದೂರ ಉಳಿಯುವ ಹಾಗೆ ನೋಡಿಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿ ಆಗಿಂದಾಗ್ಗೆ ಕೃಷಿ ಜಮೀನುಗಳು, ತೋಟಗಳಿಗೆ ಭೇಟಿ ನೀಡಿ, ಗಾಂಜಾ ಬೆಳೆಗಳನ್ನು ಬೆಳೆಯುತ್ತಿದ್ದಾರಾ ಎಂಬ ಬಗ್ಗೆ ಪರಿಶೀಲಿಸಬೇಕು. ಅಂಚೆ ಇಲಾಖೆಯ ಪಾರ್ಸೆಲ್‌ಗಳಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಯಾವುದೇ ದೂರುಗಳು ಕಂಡುಬರುತ್ತಿಲ್ಲ. ಅದೇ ರೀತಿ ಖಾಸಗಿ ಪಾರ್ಸೆಲ್ ಸರ್ವೀಸ್‌ಗಳ ಕಚೇರಿಗಳನ್ನು ಹಾಗೂ ಆನ್‌ಲೈನ್ ಮಾರುಕಟ್ಟಯೆ ಗೋದಾಮುಗಳನ್ನು ಪರಿಶೀಲಿಸಬೇಕು. ರೈಲ್ವೆ ಇಲಾಖೆಯ ಸಿಬ್ಬಂದಿಗಳು ಸಹ ನಿಲ್ದಾಣದಲ್ಲಿ ಮಾದಕ ವಸ್ತುಗಳ ಸರಬರಾಜು ಬಗ್ಗೆ ನಿಗಾ ವಹಿಸಬೇಕು. ಅನುಮಾನಸ್ಪದ ವ್ಯಕ್ತಿಗಳು ಕಂಡುಬAದಲ್ಲಿ ಅವರ ಬಗ್ಗೆ ತನಿಖೆ ಮಾಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ನಿಖಿಲ್. ಮಾತನಾಡಿ, ನಿರ್ಬಂಧಿತ ಮತ್ತುತರಿಸುವ ಔಷಧಿಗಳು ಜನ ಸಾಮಾನ್ಯರೆಲ್ಲರಿಗೂ ಮಾರಾಟ ಮಾಡುವ ಹಾಗಿಲ್ಲ. ಈ ಬಗ್ಗೆ ಜಿಲ್ಲೆಯ ಔಷಧ ನಿಯಂತ್ರಣ ಅಧಿಕಾರಿಗಳು ಔಷಧಿ ಅಂಗಡಿಗಳ ಬಗ್ಗೆ ಎಚ್ಚರವಹಿಸಬೇಕು. ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.
ಕಾಲೇಜು ವಿದ್ಯಾರ್ಥಿ ನಿಲಯಗಳಲ್ಲಿ ರಜೆಯ ದಿನಗಳಲ್ಲಿ ಮನೆಗಳಿಗೆ ಹೋಗಿ ನಂತರ ಹಾಸ್ಟೆಲ್ ಗಳಿಗೆ ಮರಳಿ ಬರುವ ಸಂದರ್ಭದಲ್ಲಿ ಅವರು ಯಾವುದಾದರೂ ಮಾದಕ ವಸ್ತುಗಳನ್ನು ತೆಗೆದುಕೊಂಡು ಬರುತ್ತಾರೆಯೇ ಎಂಬುದನ್ನು ಪರಿಶೀಲನೆ ಮಾಡಬೇಕಾಗುತ್ತದೆ ಎಂದರು.
ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ಜಿಲ್ಲಾ ಆರೋಗ್ಯ ಅಧಿಕಾರಿ ಶ್ರೀನಿವಾಸ, ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸನ್, ಅಬಕಾರಿ ಉಪ ಆಯುಕ್ತರಾದ ಸೈಯದ್ ಅಜ್ಮತ್ ಆಫ್ರಿನ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಬಾಬು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ ೨೯ ಕೆ.ಎಲ್.ಆರ್. ೦೧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ನಿಖಿಲ್, ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಮುಂತಾದವರಿದ್ದರು.