ವಿಜಯವಾಣಿ ಸುದ್ದಿಜಾಲ ಕೋಲಾರ
ಜಿಲ್ಲೆಯಲ್ಲಿ ಯಾವುದೇ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯಬಾರದು. ವಿವಿಧ ಕಾರಣಗಳಿಂದ ಶಾಲೆಗಳಿಗೆ ಹೋಗದೆ ಕೆಲಸಕ್ಕೆ ಹೋಗುತ್ತಿರುವ ಮಕ್ಕಳನ್ನು ಪತ್ತೆ ಹಚ್ಚಿ ಅವರನ್ನು ಶಾಲೆಗೆ ಸೇರಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಪಿ ಬಾಗೇವಾಡಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ವಿದ್ಯಾಭ್ಯಾಸದಿಂದ ಹೊರಗಿರುವ ಮಕ್ಕಳನ್ನು ಗಮನಿಸಿದರೆ ಅವರನ್ನು ಸ್ಥಳೀಯ ಶಾಲೆಗಳಿಗೆ ಸೇರಿಸಿ. ಸರ್ಕಾರದ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಸ್ಥಳೀಯ ಶಿಕ್ಷಕರು ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಮಕ್ಕಳು ಶಾಲೆಯಿಂದ ಹೊರಗೆ ಉಳಿದಿದ್ದಾರೆ ಎಂಬ ಬಗ್ಗೆ ಸರ್ವೇ ನಡೆಸಿ ಮಾಹಿತಿ ನೀಡಬೇಕು.
ಗ್ರಾಮೀಣ ಭಾಗದಲ್ಲಿ ಶಿಕ್ಷಕರು ಸಮುದಾಯದ ಸ್ಥಳೀಯ ಮುಖಂಡರೊAದಿಗೆ ಚರ್ಚೆ ನಡೆಸಿ, ಪೋಷಕರಿಗೆ ಶಿಕ್ಷಣದ ಬಗ್ಗೆ ಅರಿವು ಮೂಡಿಸಿ ತಮ್ಮ ಭಾಗದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪ್ರೇರೇಪಿಸಬೇಕು ಎಂದು ತಿಳಿಸಿದರು.
ಪೋಷಕರ ಒತ್ತಡ ನಿವಾರಣೆಗೆ ಕ್ರಮ:
ಅನೇಕ ಮಕ್ಕಳು ಪೋಷಕರ ಒತ್ತಡದಿಂದ ಕೆಲಸಗಳಿಗೆ ಹೋಗುತ್ತಿರುತ್ತಾರೆ. ಕುಟುಂಬ ನಿರ್ವಹಣೆಗಾಗಿ ದುಡಿಯುತ್ತಿರುತ್ತಾರೆ. ಅವರಿಗೆ ಸೂಕ್ತ ಪರಿಹಾರ ಒದಗಿಸಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳು ಒಂದಾಗಿ ಕೆಲಸ ಮಾಡಬೇಕು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಶೀಘ್ರದಲ್ಲಿಯೇ ನವೀಕರಣ ಮಾಡಿಸುವುದಾಗಿ ಪ್ರವೀಣ್ ಪಿ ಭಾಗೇವಾಡಿ ಅವರು ತಿಳಿಸಿದರು.
ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಮಕ್ಕಳ ರಕ್ಷಣಾ ಘಟಕದ ವತಿಯಿಂದ ಈ ವರ್ಷ ೫೭ ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ಪತ್ತೆಯಾಗಿದ್ದು, ಅವರನ್ನು ಶಾಲೆಗೆ ಸೇರಿಸಿ ಶಿಕ್ಷಣ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ ಮಾತನಾಡಿ, ವಿವಿಧ ಕಾರಣಗಳಿಂದ ವಿದ್ಯಾಭ್ಯಾಸದಿಂದ ಹೊರಗುಳಿದಿರುವ ಮಕ್ಕಳ ಪೋಷಕರಿಗೆ ಪ್ರತಿ ತಿಂಗಳು ೪ ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಮಾತನಾಡಿ, ಮನೆಯ ಪರಿಸ್ಥಿತಿ ಸರಿಯಿಲ್ಲದ ಮಕ್ಕಳಿಗೆ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ವಸತಿ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ನ. ೧೪ ರಂದು ಸಭೆಗೆ ಸೂಚನೆ:
ನವೆಂಬರ್ ೧೪ ರಂದು ಪ್ರತಿಯೊಂದು ಶಾಲೆಗಳಲ್ಲಿಯೂ ನಡೆಯಲಿರುವ ಪೋಷಕರ ಮತ್ತು ಶಿಕ್ಷಕರ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಬೇಕು ಎಂದು ಸಿ.ಇ.ಓ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಮೈಲಾರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗೀತಮ್ಮ, ಡಾ. ಚಾರಿಣಿ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಮಂಜುಳಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀನಿವಾಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಅಲ್ಮಾಸ್ ಪರ್ವೀನ್ ತಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ ೧೨ ಕೆ.ಎಲ್.ಆರ್. ೦೪ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿ,ಇ.ಓ ಪ್ರವೀಣ್ ಪಿ ಬಾಗೇವಾಡಿ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಮುಂತಾದವರಿದ್ದರು.