ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಡಿ.19ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಏರ್ಪಡಿಸಿದೆ.
ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳ ಇತ್ಯರ್ಥಕ್ಕಾಗಿ ಆಯೋಜಿಸಿರುವ ಈ ಕಾರ್ಯಕ್ರಮವನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್ ಶನಿವಾರ ನಡೆದ ಗೋಷ್ಠಿಯಲ್ಲಿ ತಿಳಿಸಿದರು.
ನ್ಯಾಯಾಲಯಗಳಲ್ಲಿ ಅನೇಕ ವರ್ಷಗಳಿಂದ ಬಾಕಿ ಉಳಿದಿರುವ ಮತ್ತು ರಾಜಿಯಾಗಬಹುದಾದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಉಭಯ ಪಕ್ಷಗಾರರು ಪರಸ್ಪರ ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅದಾಲತ್ ಉತ್ತಮ ವೇದಿಕೆಯಾಗಲಿದೆ. ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಕರಣಗಳು, ವಿವಾಹ ವಿಚ್ಛೇದನ ಪ್ರಕರಣಗಳು ಹೊರತುಪಡಿಸಿ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು ಸೇರಿ ಇತ್ಯಾದಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
2.48 ಲಕ್ಷ ಪ್ರಕರಣಗಳು ಗುರುತು:
ರಾಜ್ಯದ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ 19.81 ಲಕ್ಷ ಪ್ರಕರಣಗಳ ಪೈಕಿ 2.48 ಲಕ್ಷ ಪ್ರಕರಣಗಳನ್ನು ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ಗುರುತಿಸಲಾಗಿದೆ. ಡಿ.19ರಂದು ಎಲ್ಲ ತಾಲೂಕು, ಜಿಲ್ಲಾ ನ್ಯಾಯಾಲಯಗಳಲ್ಲಿ, ಹೈಕೋರ್ಟ್‌ನ ಬೆಂಗಳೂರು, ಧಾರವಾಡ ಹಾಗೂ ಕಲಬುರಗಿ ಪೀಠಗಳಲ್ಲಿ ಏಕಕಾಲಕ್ಕೆ ಅದಾಲತ್ ಕಲಾಪಗಳು ನಡೆಯಲಿವೆ. ಕೋವಿಡ್ ಹಿನ್ನೆಲೆಯಲ್ಲಿ ಅದಾಲತ್‌ಗೆ ಪ್ರಮಾಣಿತ ಕಾರ್ಯಾವಿಧಾನಗಳನ್ನು (ಎಸ್‌ಒಪಿ) ರೂಪಿಸಲಾಗಿದೆ. ಆನ್‌ಲೈನ್, ವಿಡಿಯೋ ಕಾನ್ಫರೆನ್ಸ್ ಮೂಲಕ ಪಕ್ಷಗಾರರು ತಮ್ಮ ವಕೀಲರ ಮೂಲಕ ಅದಾಲತ್‌ನಲ್ಲಿ ಭಾಗವಹಿಸಹುದು ಎಂದು ಅರವಿಂದ ಕುಮಾರ್ ಮಾಹಿತಿ ನೀಡಿದರು.