ಚಿತ್ರದುರ್ಗ: ಪ್ರಸ್ತುತ ಕಾನೂನುಗಳ ಕುರಿತು ಮಹಿಳೆಯರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಚಿತ್ರದುರ್ಗ ಜೆಎಂಎಫ್‌ಸಿ ನ್ಯಾಯಾಲಯ ದ ಪ್ರಧಾನ ಸಿವಿಲ್ ನ್ಯಾಯಾಧೀಶೆ ರಶ್ಮಿ ಎಸ್.ಮರಡಿ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ನಗರದ ಜಿಲ್ಲಾ ಬಾಲಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ದಿನಮಾನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಮಹಿಳೆಯರು, ಚಿಕ್ಕಪುಟ್ಟ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಶೋಷಣೆ ಕೂಡ ಹೆಚ್ಚಾಗುತ್ತಿದ್ದು, ಇವುಗಳನ್ನು ನಿಯಂತ್ರಿಸಲು ಹಾಗೂ ರಕ್ಷಣೆ ಪಡೆಯಲು ಕಾನೂನು, ಕಾಯ್ದೆಗಳ ತಿಳಿವಳಿಕೆ ಅಗತ್ಯವಿದೆ ಎಂದರು.
ವಕೀಲೆ ಡಿ.ಕೆ.ಶೀಲಾ ಮಾತನಾಡಿ, ಇವತ್ತಿಗೂ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಲು ಸಾಧ್ಯವಾಗಿಲ್ಲ.ಇದಕ್ಕೆ ನಮ್ಮ ಮನಸ್ಥಿತಿ ಪ್ರಮುಖ ಕಾರಣವಾಗಿದೆ. ಹಾಗಾಗಿ ನಮ್ಮ ಮನೆಯಿಂದಲೇ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಲು ಮುಂದಾದರೆ ಸಮಾನತೆ ಸಾಧ್ಯವಾಗಲಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ಮಾತನಾಡಿ, ಮಹಿಳೆಯರ ಹಕ್ಕುಗಳ ಉಲ್ಲಂ ಘನೆಯಾಗದಂತೆ ಜಾಗೃತಿ ವಹಿಸುವ ಅಗತ್ಯವಿದೆ ಎಂದು ಹೇಳಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಶ್ಮಿ ಅವರು ಉದ್ಯೋಗ ಸ್ಥ ಮಹಿಳೆಯರಲ್ಲಿ ಒತ್ತಡ ನಿರ್ವಹಣೆ ಕುರಿತು ಹಾಗೂ ಸೈಬರ್ ಪೊಲೀಸ್ ಠಾಣೆ ಪಿಐ ವೆಂಕಟೇಶ್ ಸೈಬರ್ ಸುರಕ್ಷತೆ ವಿಷಯದ ಕುರಿತು ಉಪನ್ಯಾಸ ನೀಡಿದರು.
ಜಿಪಂ ಸಿಎಸ್ ಗಾಯತ್ರಿ, ಎಎಸ್‌ಪಿ ಎಸ್.ಜೆ. ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್‌ಹೆಬ್ಬಳ್ಳಿ, ಡಿ ಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ್, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಅಧ್ಯಕ್ಷೆ ಕೊಲ್ಲಿಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಎಸ್.ವಿಜಯಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಿಗಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವೀಣಾ, ಸುಧಾ, ಅಭಿಲಾಷಾ ಮತ್ತಿತರರು ಇದ್ದರು.