ಕೇಂದ್ರ ಸರ್ಕಾರ ಅಡುಗೆ ಅನಿಲ ಮತ್ತು ಇಂಧನ ಬೆಲೆ ಏರಿಸಿರುವುದನ್ನು ಖಂಡಿಸಿ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ನಗರದ ನ್ಯಾಯಾಲಯದ ಮುಂಭಾಗದ ಗಾಂಧಿ ಪತ್ರಿಮೆ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ತಲೆ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು, ಸೌದೆ ಒಲೆಯಲ್ಲಿ ಅಡುಗೆ ಮಾಡುವ ಮೂಲಕ ವ್ಯಂಗ್ಯ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ ಧರಿಸಿ ಸಿರಂಜಿನ ಮೂಲಕ ರಕ್ತ ಹೀರುತ್ತಿರುವ ಕಲ್ಪಿತ ಪ್ರದರ್ಶನ ಮಾಡಿ ಧಿಕ್ಕಾರ ಕೂಗಿ ಕಿಡಿಕಾರಿದರು.
ಬೆಲೆ ಏರಿಕೆಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ದುರಾಡಳಿತ ಕಾರಣವಾಗಿದೆ. ಅಪಾರ ಪ್ರಮಾಣದಲ್ಲಿ ತೆರಿಗೆ ಸಂಗ್ರಹಿಸುವಲ್ಲಿ ಆಸಕ್ತಿ ತೋರುತ್ತಿರುವ ಕೇಂದ್ರ ಉದ್ಯಮಿಗಳ ಹಿತಾಸಕ್ತಿ ಕಾಪಾಡುವಲ್ಲಿ ನಿರತವಾಗಿದೆ. ಜನಸಾಮಾನ್ಯರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಆಕ್ರೋಶ ಹೊರ ಹಾಕಿದರು.
ನಗರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಅಬ್ರಾರ್ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಬಡವರ ರಕ್ತ ಹೀರುತ್ತಿದೆ. ಅದನ್ನು ಬಿಜೆಪಿ ವಿರೋಧಿಸಿ ಹೋರಾಟ ಮಾಡಬೇಕು. ಬದಲಾಗಿ ಜನಾಕ್ರೋಶ ಯಾತ್ರೆ ಮಾಡುತ್ತಿದೆ. ಜನಾಕ್ರೋಶ ಯಾತ್ರೆಯ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಜನರಿಗೆ ಯಾರು ಬೆಲೆ ಏರಿಕೆ ಮಾಡಿದ್ದಾರೆ ಎಂಬುದು ಗೊತ್ತು. ಅದಕ್ಕೆ ಕೇಂದ್ರದ ವಿರುದ್ದ ಈಗಾಗಲೇ ಬೇಸರ ಹೊರ ಹಾಕುತ್ತಿದ್ದಾರೆ ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿಕುಮಾರ್ ಮಾತನಾಡಿ, ಜನವಿರೋಧಿ ಬಿಜೆಪಿಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ನೈತಿಕತೆ ಇಲ್ಲ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಜನಾಕ್ರೋಶ ರ‌್ಯಾಲಿ ನಡೆಸಲಿ ಎಂದರು.
ರಾಜ್ಯದಿಂದ ಅತಿ ಹೆಚ್ಚು ತೆರಿಗೆ ಪಡೆಯುತ್ತಿರುವ ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ನಮ್ಮ ತೆರಿಗೆ ಪಾಲನ್ನು ನೀಡದೆ ದ್ವೇಷದ ರಾಜಕಾರಣ ಮಾಡುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಇಂಧನದ ಬೆಲೆ ಏರಿಕೆ ಆಗುತ್ತಿರುವುದು ಮೋದಿ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ನಗರ ಪ್ರಧಾನ ಕಾರ್ಯದರ್ಶಿ ಲಖನ್, ದಿಲೀಪ್, ಸಲ್ಮಾನ್, ವಿನೋದ್, ಅದ್ನಾನ್, ಕೆ.ಆರ್.ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹೊಯ್ಸಳ ಮಲ್ಲೇಶ್, ರಾಕೇಶ್, ಕಾರ್ತಿಕ್, ಹೇಮಂತ್, ರಾಜೇಂದ್ರ, ಪವನ್, ವಿನಯ್, ಮೈಸೂರು ಬಸವಣ್ಣ ಇತರರಿದ್ದರು.